ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ವಾಯು ಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯಾದ್ಯಂತ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎರಡು ದಿನದಿಂದ ರಾಜ್ಯದ ಬಹುತೇಕ ಎಲ್ಲ ಕಡೆ ಭಾರಿ ಮಳೆಯಾಗುತ್ತಿದೆ. ಮಂಗಳವಾರ ದಕ್ಷಣ ಒಳನಾಡಿನಲ್ಲಿ 4 ಸೆಂ.ಮೀ. ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.