ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಮತ್ತೆ ಮೂರು ತಿಂಗಳ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿ.14ಕ್ಕೆ ಹೈಕೋರ್ಟ್ ಮುಂದೂಡಿದೆ.
ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30 ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು ಎಂದು 2022ರ ಸೆ.30ರಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಮನವಿ ಸಲ್ಲಿಸಿದ್ದು, ಅದರ ವಿಚಾರಣೆ ಮಂಗಳವಾರ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠದ ಮುಂದೆ ಬಂದಿತ್ತು.
ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಹಾಜರಾಗಿ, ಚುನಾವಣೆ ನಡೆಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಲಾಗಿದೆ. ಹಾಗೆಯೇ, ಚುನಾವಣೆ ನಡೆಸಲು ಕಾಲಾವಕಾಶ ಕೋರಿರುವ ಸರ್ಕಾರದ ಅರ್ಜಿ ಕುರಿತು ಮಾಹಿತಿ ನೀಡಿ ಆಯೋಗವು ಸುಪ್ರಿಂ ಕೋರ್ಟ್‌ಗೆ ಮೆಮೊ ಸಲ್ಲಿಸಿದೆ. ಅರ್ಜಿಯು ಡಿ.6ರಂದು ಸುಪ್ರಿಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಸುಪ್ರಿಂ ಕೋರ್ಟ್ ವಿಚಾರಣೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ತಿಳಿಸಿ ವಿಚಾರಣೆಯನ್ನು ಡಿ.14ಕ್ಕೆ ಮುಂದೂಡಿದೆ.
ಇದನ್ನೂ ಓದಿ:ಬಿಬಿಎಂಪಿ ಚುನಾವಣೆಗೆ ಮತ್ತೆ ಮೂರು ತಿಂಗಳ ಕಾಲಾವಕಾಶ ಕೇಳಿದ ಸರ್ಕಾರ