ಬೆಂಗಳೂರು: ಬ್ರಿಟ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ನಿಂದ ಆಯೋಜಿಸುತ್ತಿರುವ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಲೀಗ್ನಲ್ಲಿ ಆಡುವುದಕ್ಕೆ ಒಪ್ಪಿಗೆ ಸೂಚಿಸಿರುವ ಆಟಗಾರರಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ವಿಭಾಗೀಯ ಪೀಠ ನಿರಾಕರಿಸಿತು. ಈ ಆದೇಶದಿಂದ ಇದೇ ಭಾನುವಾರದಿಂದ ನಗರದಲ್ಲಿ ಪ್ರಾರಂಭವಾಗುತ್ತಿರುವ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಲೀಗ್ಗಿದ್ದ ಆತಂಕ ದೂರವಾಗಿದೆ.
ಬ್ರಿಟ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಆಯೋಜಿಸುತ್ತಿರುವ ಲೀಗ್ನಲ್ಲಿ ಆಟಗಾರರು ಭಾಗಿಯಾಗುವುದನ್ನು ಪ್ರಶ್ನಿಸಿ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್(ಬಿಎಐ) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರಿದ್ದ ವಿಶೇಷ ಪೀಠ ಮಧ್ಯಪ್ರವೇಶಿಸಿಸಲು ನಿರಾಕರಿಸಿದೆ. ಅಲ್ಲದೆ, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.
ಏನಿದು ಪ್ರಕರಣ?:ಇದೇ ಭಾನುವಾರ ನಗರದಲ್ಲಿ ಬಿಟ್ಸ್ ಪೋರ್ಟ್ ಪ್ರೈವೇಟ್ ಲಿಮಿಟಿಡ್ ಸಹಯೋಗದಲ್ಲಿ ಪಂದ್ಯಾವಳಿಗಳು ನಡೆಯುತ್ತಿದ್ದು, ಈ ಪಂದ್ಯದಲ್ಲಿ ಆಟಗಾರರು, ತರಬೇತುದಾರರು ಮತ್ತು ತಾಂತ್ರಿಕ ಸಿಬ್ಬಂದಿ ಭಾಗವಹಿಸುವ ಸಂಬಂಧ ಬಿಎಐ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ಅರ್ಜಿ ಸಲ್ಲಿಸಿತ್ತು.