ಬೆಂಗಳೂರು : ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಪೊಲೀಸರು ಬಾಡಿ ಕ್ಯಾಮರಾ ಧರಿಸುವಂತೆ ನಿರ್ದೇಶನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ವಿವರ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತು ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪೊಲೀಸರು ಬಾಡಿ ಕ್ಯಾಮರಾ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಯಾಮೆರಾ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾರ್ಯಾದೇಶ ಹೊರಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ವಿವರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಕೋರಿಕೆ ಪರಿಗಣಿಸಿದ ಪೀಠ, ಈ ಕುರಿತು ಕೈಗೊಂಡಿರುವ ಕ್ರಮಗಳ ವಿವರ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.