ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ - ಪ್ರತಿವಾದ ಆಲಿಸಿದ ಪೀಠ, ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ರ್ದುಬಳಕೆಗೆ ಸಂಬಂಧಿಸಿದಂತೆ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡಬೇಕು.
ಅದೇ ರೀತಿ ಆಯೋಗದ ವರದಿ ಆಧರಿಸಿ ಲೋಕಾಯುಕ್ತ ಸಂಸ್ಥೆಯು 2016ರಲ್ಲಿ ನೀಡಿದ ವರದಿ ಮೇರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್ 12 (2) ಪ್ರಕಾರ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ-ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶಿಸಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ ತನಿಖೆ ನಡೆಸಲು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು.
ಹೈಕೋರ್ಟ್ ತನಿಖೆಯ ಮೇಲ್ವಿಚಾರಣೆ ಮಾಡಬೇಕು. 2016ರಲ್ಲಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಸೇರಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಬಳಿ ಇರುವ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಂಡು ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಓದಿ:ವ್ಯತ್ಯಸ್ಥ ತುಟ್ಟಿಭತ್ಯೆ ಪಾವತಿ ಮುಂದೂಡಿರುವ ಕ್ರಮ ಪರಿಶೀಲನೆಯಲ್ಲಿದೆ: High Courtಗೆ ಸರ್ಕಾರದ ಮಾಹಿತಿ