ಬೆಂಗಳೂರು:ರಾಜ್ಯದಲ್ಲಿ 2017ರಿಂದ ಈವರೆಗೆ ನಡೆದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ 2016ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನಷ್ಟ ಪರಿಹಾರ ವಿತರಿಸಲು ಸಂಬಂಧಿಸಿದವರಿಗೆ ನಿರ್ದೇಶಿಸಬೇಕು ಎಂದು ಕೋರಿ ಯಾದಗಿರಿ ರೈತ ಮಲ್ಲನಗೌಡ ಪರಿವಾಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ಡಿ ರೋಜಾರಿಯೊ ವಾದ ಮಂಡಿಸಿ, ಬೆಳೆ ನಷ್ಟವೇ ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣ. ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊ (ಎನ್‌ಸಿಆರ್‌ಬಿ) ಪ್ರಕಾರ 2016ರ ಮಾರ್ಚ್‌ನಿಂದ ನವೆಂಬರ್‌ವರೆಗೆ ರಾಜ್ಯದಲ್ಲಿ 400ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪರಿಸ್ಥಿತಿಯ ವಿಷಮತೆಯನ್ನು ವಿವರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ ರಾಜ್ಯದಲ್ಲಿ 1997 ರಿಂದ 2016ರವೆರೆಗೆ ಒಟ್ಟು 40,3,46 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ 2017 ರಿಂದ ಈವರೆಗೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣಗಳೇನು?. ಎಷ್ಟು ಅರ್ಹ ಪ್ರಕರಣಗಳಲ್ಲಿ ಪರಿಹಾರವನ್ನು ಯಾವ ಕಾಲಮಿತಿಯೊಳಗೆ ನೀಡಲಾಗಿದೆ ಎಂಬ ಬಗ್ಗೆ ವಿವರವಾದ ಪ್ರಮಾಣಪತ್ರವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತು.
ಅರ್ಜಿಯಲ್ಲಿ, ರಾಜ್ಯದ ಎಲ್ಲಾ ತಾಲೂಕುಗಳಲ್ಲಿ 2016ರ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಂಡ ರೈತರಿಗೆ ತಕ್ಷಣ ನಷ್ಟ ಪರಿಹಾರ ವಿತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಬೆಳೆ ವಿಮೆ ನಷ್ಟ ಪರಿಹಾರ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಪರಿಹಾರ ವಿತರಣೆಯನ್ನು ತ್ವರಿತವಾಗಿ ಮಾಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಹಾಗೆಯೇ ಯೋಜನೆಯ ಪ್ರೀಮಿಯಂ ದರ, ಆರಂಭಿಕ ಇಳುವರಿ ನಿಗದಿ, ಬೆಳೆ ಕಟಾವು ಪ್ರಕ್ರಿಯೆ ಮತ್ತಿತರ ವಿಚಾರಗಳ ಬಗ್ಗೆ ತನಿಖೆ ನಡೆಸಲು ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ತಜ್ಞರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಖಾಸಗಿ ವಿಮಾ ಕಂಪೆನಿಗಳಿಗೆ ಈವರೆಗೆ ಪಾವತಿಸಲಾದ ಹಣ ಎಷ್ಟು? ಅದರಲ್ಲಿ ರೈತರಿಗೆ ವಿತರಿಸಿದ ಮೊತ್ತವೆಷ್ಟು?. ವಿತರಣೆ ಆಗದಿರುವುದಕ್ಕೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.