ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧದ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯ ಸೂಕ್ತ ಸಾಕ್ಷ್ಯಾಧಾರಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಕಣ್ಣು ಮುಚ್ಚಿಕೊಂಡು ಆರೋಪ ಪಟ್ಟಿಯನ್ನು ಅಂಗೀಕರಿಸಿದೆ ಎಂದು ನ್ಯಾಯಪೀಠ ತಿಳಿಸಿದೆ. ಈ ಆದೇಶದಿಂದ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡ ರದ್ದಾಂತಾಗಿದೆ.
ತನ್ನ ವಿರುದ್ಧದ ಶಿಕ್ಷೆ ರದ್ದುಪಡಿಸುವಂತೆ ಕೋರಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ. ರಾಮಕೃಷ್ಣ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ, ತನಿಖಾಧಿಕಾರಿಗಳು ಅರ್ಜಿದಾರರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯ ಆರೋಪಿಯ ವಿರುದ್ಧ ಒಪ್ಪಬಹುದಾದಂತಹ ದಾಖಲೆಗಳನ್ನು ಪರಿಗಣಿಸಿಲ್ಲ. ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಗಣಿಸಿ ಆದೇಶವನ್ನು ನೀಡಿದೆ.
ಜತೆಗೆ, ತನಿಖಾಧಿಕಾರಿಗಳು ಪೊಲೀಸ್ ಇನ್ಸ್‌ಪೆಕ್ಟರ್ ಅವರ ಪತ್ನಿಯ ವ್ಯವಹಾರ ನಡೆಸುತ್ತಿದ್ದು, ಪ್ರತ್ಯೇಕವಾಗಿ ಆದಾಯ ತೆರಿಗೆಯನ್ನು ಪಾವತಿ ಮಾಡುತ್ತಿದ್ದಾರೆ. ಈ ವ್ಯವಹಾರದಿಂದ ಬಂದ ಆದಾಯವನ್ನು ಅರ್ಜಿದಾರರ ಅಕ್ರಮ ಸಂಪಾದನೆ ಎಂಬುದಾಗಿ ಪರಿಗಣಿಸಿದೆ. ಅಷ್ಟೇ ಅಲ್ಲದೆ, ಇನ್ಸ್‌ಪೆಕ್ಟರ್ ಅವರ ಹೂಡಿಕೆ ಮತ್ತು ವೆಚ್ಚಗಳನ್ನು ತಪ್ಪಾಗಿ ಲೆಕ್ಕಾಚಾರ ಮಾಡಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.