ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲ ಪ್ರಕರಣದ ಆರೋಪಿ ಪಶ್ಚಿಮ ಆಫ್ರಿಕಾದ ಸೆನಗಲ್ ನಿವಾಸಿ ಲೂಮ್ ಪೆಪ್ಪರ್‌ಗೆ ನೀಡಿದ್ದ ಜಾಮೀನು ರದ್ದುಪಡಿಸಿರುವ ಹೈಕೋರ್ಟ್, ಮರು ವಿಚಾರಣೆಗಾಗಿ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ.
ಲೂಮ್ ಪೆಪ್ಪರ್‌ಗೆ ಜಾಮೀನು ನೀಡಿ ನಗರದ 33ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ 2021ರ ಫೆ.25ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ, ಸಿಸಿಬಿ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಜಿ. ಉಮಾ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರನನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದು, ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಆತನಿಂದ 10 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಾಸಿಕ್ಯೂಷನ್ ತಿಳಿಸಿದೆ. ಜೊತೆಗೆ, ಅರ್ಜಿದಾರನ ವಿರುದ್ಧ ವಿದೇಶಿಯರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಆದರೆ, ಈ ಕುರಿತು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ.ಕೇವಲ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಕೈಗೊಂಡಿರುವ ನಿರ್ಧಾರವನ್ನು ಪರಿಗಣಿಸಿ ಜಾಮೀನು ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ 7ನೇ ಆರೋಪಿ ಲೂಮ್ ಪೆಪ್ಪರ್‌ಗೆ ನೀಡಿದ್ದ ಜಾಮೀನು ರದ್ದುಪಡಿಸಿದೆ. ಅಲ್ಲದೇ, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.