ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಆಯೋಗಕ್ಕೆ ವರದಿ ಸಲ್ಲಿಸಲು ಹೈಕೋರ್ಟ್ 45 ದಿನಗಳ ಗಡುವು ವಿಧಿಸಿದೆ.
ರಾಜ್ಯ ಸರ್ಕಾರವು ನ್ಯಾ.ನಾಗಮೋಹನ್ ದಾಸ್ ಅವರ ಏಕವ್ಯಕ್ತಿ ಆಯೋಗ ರಚಿಸಿ 2023ರ ಆ.5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ್ ಇನ್ಫ್ರಾ ಪ್ರಾಜೆಕ್ಟ್ಸ್ ಸೇರಿದಂತೆ ಹಲವು ಗುತ್ತಿಗೆ ಕಂಪನಿಗಳು ಮತ್ತು ಗುತ್ತಿಗೆದಾರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಏಕ ವ್ಯಕ್ತಿ ಆಯೋಗಕ್ಕೆ ಕಾಲಮಿತಿ ನಿಗದಿಪಡಿಸಿ ಆದೇಶಿಸಿದೆ.
ಅಲ್ಲದೆ, 2019-20ರಿಂದ 2022-23ರವರೆಗೆ ಬಿಬಿಎಂಪಿ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳು ಗುತ್ತಿಗೆದಾರರಿಗೆ ವಹಿಸಿದ ಎಲ್ಲ ಗುತ್ತಿಗೆ ಕಾಮಗಾರಿಗಳ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ಘಟಕವನ್ನು (ಎಸ್‌ಐಟಿ) ರಚಿಸಿದೆ. ಈ ಎಸ್‌ಐಟಿಯ ರಚನೆಯ ಸಿಂಧುತ್ವವನ್ನು ಈ ನ್ಯಾಯಾಲಯದ ಮುಂದೆ ಪ್ರಶ್ನಿಸಲಾಗಿದೆ. ಎಸ್‌ಐಟಿ ರಚನೆಯ ನಂತರ ಯಾವುದೇ ಪ್ರಕ್ರಿಯೆಗಳೂ ನಡೆದಿಲ್ಲ. ಇದರ ಬೆನ್ನಲ್ಲೆ 2019ರಿಂದ 2023ರವರೆಗೆ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ಏಕವ್ಯಕ್ತಿ ಆಯೋಗ ರಚಿಸಲಾಗಿದೆ. ಅಲ್ಲಿಯೂ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.
ಎಸ್‌ಐಟಿ ಕೈಗೊಂಡ ಎಲ್ಲಾ ಶೋಧನೆಗಳನ್ನು (ಫೈಡಿಂಗ್ಸ್) ಏಕವ್ಯಕ್ತಿಯ ಆಯೋಗ ಪರಿಗಣಿಸಲಿದೆ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಪಾಲುದಾರರು ಮತ್ತು ಆಯೋಗವು ಇರಿಸುವ ಎಲ್ಲ ದಾಖಲೆಗಳನ್ನು ಪರಿಗಣಿಸಲು ಆಯೋಗಕ್ಕೆ 45 ದಿನಗಳ ಕಾಲಮಿತಿ ನಿಗದಿಪಡಿಸಲಾಗುತ್ತಿದೆ. ಎಲ್ಲ ಪಾಲುದಾರರ ವಾದವನ್ನು ಆಯೋಗವು ಆಲಿಸಿದ ನಂತರ ಕಾನೂನು ಪ್ರಕಾರ ವರದಿಯನ್ನು ಸಿದ್ಧಪಡಿಸಬೇಕು. ಆ ವರದಿಯನ್ನು 45 ದಿನಗಳ ಪೂರ್ಣಗೊಂಡ ನಂತರ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ಹೈಕೋರ್ಟ್ ವಿಚಾರಣೆಯನ್ನು 2024ರ ಫೆ.6ಕ್ಕೆ ಮುಂದೂಡಿದೆ.