ಬೆಂಗಳೂರು:ಅಪ್ರಾಪ್ತೆಗೆ ಹಣದ ಆಮಿಷ ನೀಡಿ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ಬಂಧನದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಗೌಡಗೆರೆ ಗ್ರಾಮದ ಬಶೀರ್(44) ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮೊಹಮದ್ ನವಾಜ್ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿ ದೂರು ನೀಡುವ ಸಂದರ್ಭದಲ್ಲಿ ಆರೋಪಿಯ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಜೊತೆಗೆ, ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಚಾರಣಾ ನ್ಯಾಯಾಲಯ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿಲ್ಲ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದು, ಅರ್ಜಿ ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ ಏನು?:ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಗ್ರಾಮವೊಂದರ 14 ವರ್ಷದ ಸಂತ್ರಸ್ತ ಬಾಲಕಿಯನ್ನು ಮಧುಗಿರಿ ಮೂಲದ ಗೌರಿ ಎಂಬುವರು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ, ಹಣ ನೀಡುವುದಾಗಿ ಅಮಿಷ ನೀಡಿ ಇತರರೊಂದಿಗೆ ದೈಹಿಕ ಸಂಪರ್ಕ ಹೊಂದುವಂತೆ ಕುಮ್ಮಕ್ಕು ನೀಡುತ್ತಿದ್ದರು. ಈ ನಡುವೆ ಅರ್ಜಿದಾರ ಬಶೀರ್, ಗೌರಿ ಮೂಲಕ ಸಂತ್ರಸ್ತ ಬಾಲಕಿಗೆ ಹಣ ನೀಡಿ ಅತ್ಯಾಚಾರವೆಸಗಿದ್ದ.