ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ರಸ್ತೆ, ಉದ್ಯಾನ ಸೇರಿ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು 6 ವಾರಗಳಲ್ಲಿ ತೆರವು ಮಾಡುವಂತೆ 2010ರ ಫೆ.16ರಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನದ ಅನುಸಾರ ಸರ್ಕಾರ ಕೈಗೊಂಡ ಹಾಗೂ ಕೈಗೊಳ್ಳಲಿರುವ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ಮುಂದಿನ ಆರು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು.