ಕರ್ನಾಟಕ

karnataka

ETV Bharat / state

ಪುಷ್ಪಗಿರಿ ಬುಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಪರಿಶೀಲಿಸಲು ಹೈಕೋರ್ಟ್ ನಿರ್ದೇಶನ - Justice A.S. Oka latest news

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಭೋಜಪ್ಪ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High Court direction to review the Illegal stone mining at the foot of Pushpagiri
ಪುಷ್ಪಗಿರಿ ಬುಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ

By

Published : Jul 28, 2021, 8:48 PM IST

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಸೂಕ್ಷ್ಮ ಪರಿಸರ ವಲಯ ಪುಷ್ಪಗಿರಿ ಬುಡದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಗಣಿ ಇಲಾಖೆಯು ಸ್ಥಳ ಪರಿಶೀಲನೆ ನಡೆಸಲು ಸೂಕ್ತ ಅಧಿಕಾರಿ ನಿಯೋಜಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಭೋಜಪ್ಪ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಡಿ. ಕೃಷ್ಣಮೂರ್ತಿ ವಾದಿಸಿ, ಸೂಕ್ಷ್ಮ ಪರಿಸರ ವಲಯ ಆಗಿರುವ ಪುಷ್ಪಗಿರಿ ಬುಡದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.

ಹೇಳಿಕೆ ಪರಿಗಣಿಸಿದ ಪೀಠ, ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಸ್ಥಳದ ಪರಿಶೀಲನೆ ನಡೆಸಲು ಗಣಿ ಇಲಾಖೆಯು ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಅವರು ಪುಷ್ಪಗಿರಿ ಬುಡದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ಒಂದು ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಈ ಕುರಿತ ವರದಿಯನ್ನು ಆಗಸ್ಟ್ 30ರೊಳಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿತು.

ಅರ್ಜಿದಾರರ ಆರೋಪ :

ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು ಗ್ರಾಮದ ನಿವಾಸಿ ಸಿ.ಡಿ.ದೇವಿ ಪ್ರಸಾದ್ ಎಂಬುವರು ಪುಷ್ಪಗಿರಿ ಬುಡದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ಇಂತಹ ಗಣಿಗಾರಿಕೆ ನಡೆಸುವುದು ಜೈವಿನ ಅಸಮತೋಲನಕ್ಕೆ ಕಾರಣವಾಗಿದೆ. ಈ ಕುರಿತು ಸ್ಥಳೀಯ ನಿವಾಸಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಲಿಖಿತವಾಗಿ ದೂರು ನೀಡಿದ್ದರೂ, ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ABOUT THE AUTHOR

...view details