ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠವು ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್ ಜನರಲ್ ಅವರು ಸಮಯ ಕೋರಿದ್ದಾರೆ. ಹೀಗಾಗಿ, 2024ರ ಜನವರಿ 5ರಂದು ಅಡ್ವೋಕೇಟ್ ಜನರಲ್ ವಿಸ್ತೃತವಾಗಿ ಉತ್ತರ ನೀಡಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ನ್ಯಾಯಪೀಠ, ಸರ್ಕಾರದ ಕ್ರಮದಿಂದ ನೀವು ಹೇಗೆ ಬಾದಿತರಾಗುತ್ತೀರಾ. ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಎಂದು ಅರ್ಜಿ ಸಲ್ಲಿಸಿದ್ದೀರಾ? ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸದೇ ತಕರಾರು ಅರ್ಜಿ ಸಲ್ಲಿಸಿರುವುದು ಏಕೆ? ಎಂದು ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಪರ ವಕೀಲರ ವೆಂಕಟೇಶ್ ದಳವಾಯಿ, 'ಯಾವುದೇ ಪ್ರಕರಣದಲ್ಲಿ ವೈಯಕ್ತಿಕವಾಗಿ ತೊಂದರೆ ಅನುಭವಿಸದಿದ್ದರೂ, ಯಾರು ಬೇಕಾದರೂ ಕ್ರಿಮಿನಲ್ ಕಾನೂನಿಗೆ ಚಾಲನೆ ನೀಡಬಹುದಾಗಿದೆ' ಎಂದು ಪೀಠಕ್ಕೆ ವಿವರಿಸಿದರು. ಇದಕ್ಕೆ ನ್ಯಾಯಪೀಠ ಸಹಮತಿ ವ್ಯಕ್ತಪಡಿಸಿತು. ಬಳಿಕ ವಾದ ಮಂಡಿಸಲು ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 2019ರಲ್ಲಿ ಬಿಜೆಪಿ ಸರ್ಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಅನಂತರ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28 ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ಸಿಬಿಐಗೆ ತನಿಖೆಗೆ ನೀಡಿದ್ದ ಕ್ರಮವನ್ನು ಪ್ರಶ್ನಿಸಿದ್ದ ಮೇಲ್ಮನವಿ ಹಿಂಪಡೆದ ಡಿಕೆಶಿ; ಅನುಮತಿ ನೀಡಿದ ಹೈಕೋರ್ಟ್