ಬೆಂಗಳೂರು: ರಾಜ್ಯದಲ್ಲಿ ಕೇಂದ್ರದ ಪ್ರಾಯೋಕತ್ವದ ಮಿಷನ್ ವಾತ್ಸಲ್ಯ ಯೋಜನೆ ಪರಿಣಾಮಕಾರಿ ಜಾರಿಗೆ ಅಗತ್ಯವಿರುವ ಆರ್ಥಿಕ ನೆರವು ಪಡೆದುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಸರ್ಕಾರೇತರ ಸಂಸ್ಥೆ ಬಚ್ಪನ್ ಬಚಾವೋ ಆಂದೋಲನ್ ಸಲ್ಲಿಸಿದ್ದ ಅರ್ಜಿ ಆಧರಿಸಿ ಸುಪ್ರೀಂಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದೆ. ಈ ನಿರ್ದೇಶನಗಳ ಜಾರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅಷ್ಟೇ ಅಲ್ಲದೆ, ಮಿಷನ್ ವಾತ್ಸಲ್ಯ ಯೋಜನೆಯನ್ನು ಪರಿಣಾಮಕಾರಿ ಜಾರಿಗೆ ಅಗತ್ಯ ಯೋಜನೆಗಳನ್ನು ಸಲ್ಲಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ಅವಕಾಶವಿದೆ. ಅದರಂತೆ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆಯೇ? ಇಲ್ಲವಾದರೆ ಏಕೆ ಸಲ್ಲಿಸಿಲ್ಲ? ಮುಂದಿನ ವರ್ಷದ ಯೋಜನೆಯನ್ನು ಸಲ್ಲಿಸಬೇಕು ಮತ್ತು ಅವುಗಳ ಒಂದು ಪ್ರತಿಯನ್ನು ನ್ಯಾಯಾಲಯಕ್ಕೂ ಸಲ್ಲಿಸಬೇಕು ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.