ಬೆಂಗಳೂರು: ಹೈಕೋರ್ಟ್ ವಿಸ್ತರಣೆಗೆ ಹೆಚ್ಚಿನ ಸ್ಥಳಾವಕಾಶ ಒದಗಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಪರಿಗಣಿಸಲು ಕನಿಷ್ಠ ಮೂರು ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ. ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್. ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಶರಣ್ ದೇಸಾಯಿ ಎಂಬವರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.
ರಾಜ್ಯ ಹೈಕೋರ್ಟ್ಗೆ ಸೂಕ್ತ ಸ್ಥಳಾವಕಾಶ ಕಲ್ಪಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ಒಂದು ಪ್ರಸ್ತಾವನೆ ಸಲ್ಲಿಸಿದರೆ ಸಾಕಾಗುವುದಿಲ್ಲ. ಹಾಗಾಗಿ, ಮೂರು ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕು. ಆಗ ಮುಖ್ಯಮಂತ್ರಿಗಳು ಪರಿಗಣಿಸಲು ಹೆಚ್ಚಿನ ಅವಕಾಶಗಳು ಇರುತ್ತದೆ. ಅದರಂತೆ ರಾಜ್ಯ ಸರ್ಕಾರ ಮುಂದಿನ ಮೂರು ವಾರಗಳಲ್ಲಿ ಮುಖ್ಯಮಂತ್ರಿಗಳಿಗೆ ಮೂರು ಪ್ರಸ್ತಾವನೆ ಸಲ್ಲಿಸಬೇಕು. ನಂತರದ ಎರಡು ವಾರದಲ್ಲಿ ಆ ಪ್ರಸ್ತಾವನೆಗಳ ಬಗ್ಗೆ ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ.
ರಾಜ್ಯ ಸರ್ಕಾರ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮೂರು ಪ್ರಸ್ತಾವನೆಗಳ ಪ್ರತಿಯನ್ನು ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೂ ಒದಗಿಸಬೇಕು. ಆ ಪ್ರತಿಗಳನ್ನು ರಿಜಿಸ್ಟ್ರಾರ್ ಜನರಲ್ ಅವರು ಹೈಕೋರ್ಟ್ ಕಟ್ಟಡ ಸಮಿತಿ ಮುಂದಿಡಬೇಕು. ಸಮಿತಿ ನೀಡುವ ಪ್ರತಿಕ್ರಿಯೆಯನ್ನು ಸಹ ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕು. ಇದರಿಂದ ಸಮಿತಿಯ ಪ್ರತಿಕ್ರಿಯೆಯನ್ನು ಮುಖ್ಯಮಂತ್ರಿಗಳು ಪರಿಗಣಿಸಲು ಸಹಕಾರಿಯಾಗುತ್ತದೆ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.
ಅಲ್ಲದೆ, ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಚೇರಿಗಳನ್ನು ಹತ್ತಿರದ ಕಟ್ಟಡಕ್ಕೆ ಸ್ಥಳಾಂತರಿಸಲು ಪರಿಸರ ನಿರಾಕ್ಷೇಪಣಾ ಪತ್ರ ಪಡೆಯಲು ಸರ್ಕಾರ ಕಾರ್ಯೋನ್ಮುಖವಾಗಬೇಕು ಎಂದು ನಿರ್ದೇಶಿಸಿದೆ.