ಬೆಂಗಳೂರು:2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಅರುಣ ಶಹಾಪುರ ವಿರುದ್ಧ ದಾಖಲಿಸಿರುವ ದೂರು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರುಣ ಶಹಾಪುರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ, ದೂರು ರದ್ದುಗೊಳಿಸಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿದೆ.
ಪರಿಷತ್ ಸದಸ್ಯ ಅರುಣ ಶಹಾಪುರ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಚುನಾವಣಾ ಪ್ರಚಾರಕ್ಕೆ ಧಾರ್ಮಿಕ ಸ್ಥಳವನ್ನು ಅನುಮತಿಯಿಲ್ಲದೆ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಅರ್ಜಿದಾರರ ವಿರುದ್ಧ ವಾಟ್ಸಪ್ ವಿಡಿಯೋ ಆಧರಿಸಿ ದೂರು ದಾಖಲಿಸಲಾಗಿದೆ. ಯಾವುದೇ ಖಚಿತ ಸಾಕ್ಷ್ಯಾಧಾರಗಳಿಲ್ಲದೆ ಊಹೆಗಳ ಆಧಾರದಲ್ಲಿ ದೂರು ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ 48 ಗಂಟೆಗಳ ಬಳಿಕ ದೂರು ದಾಖಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲಿ ಆರೋಪ ಸಾಬೀತಾಗಿಲ್ಲ. ಅರ್ಜಿದಾರರ ವಿರುದ್ಧ ರಾಜಕೀಯ ದ್ವೇಷದಿಂದ ಈ ದೂರು ದಾಖಲಿಸಲಾಗಿದೆ. ಆದ್ದರಿಂದ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದರು. ಕೋರಿಕೆ ತಿರಸ್ಕರಿಸಿರುವ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ಎದುರಿಸುವಂತೆ ಸೂಚಿಸಿ, ಅರ್ಜಿ ವಜಾಗೊಳಿಸಿದೆ.
ಓದಿ:ಬಿಬಿಎಂಪಿ ಚುನಾವಣೆ ವಿಚಾರ: ಡಿ.18ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ
ಪ್ರಕರಣದ ಹಿನ್ನೆಲೆ: 2019ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಅರ್ಜಿದಾರರು ಪ್ರಚಾರ ನಡೆಸಿದ್ದರು. ಈ ವೇಳೆ ಏ. 14ರಂದು ಇಂಡಿ ತಾಲೂಕಿನ ಖೇಡಗಿ ಗ್ರಾಮದ ಲಕ್ಷ್ಮಿ ದೇವಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಸೆಕ್ಟರ್ ಅಧಿಕಾರಿ ಅಜಿತ್ ಹಲಸೋಡೆ ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಅದರಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಇದನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.