ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ವೈದ್ಯಕೀಯ ಸ್ನಾತಕೋತ್ತರ "ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ" ನೀಟ್ ಮುಂದೂಡಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ, ಕೋವಿಡ್ ಪರಿಸ್ಥಿತಿಯನ್ನು ಆಧರಿಸಿ ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿದೆ. ಕೇಂದ್ರದ ನಿರ್ಧಾರದಲ್ಲಿ ಯಾವುದೇ ಲೋಪ ಕಾಣುತ್ತಿಲ್ಲ. ವಿದ್ಯಾರ್ಥಿಗಳ ಆರೋಗ್ಯ ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಕೇಂದ್ರದ ವಾದ
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ, ಕೋವಿಡ್ ಎರಡನೇ ಅಲೆ ಉಲ್ಬಣಗೊಂಡ ಹಿನ್ನೆಲೆ ದೇಶಾದ್ಯಂತ ವೈದ್ಯರ ಕೊರತೆ ಉಂಟಾಗಿದೆ. ಆದ್ದರಿಂದ ಅಂತಿಮ ವರ್ಷದ ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಿಕೊಳ್ಳಲು ತುರ್ತು ನೇಮಕಾತಿ ಮಾಡಿಕೊಳ್ಳಲಾಗಿದೆ. ಕೋವಿಡ್ ಸೇವೆ ಸಲ್ಲಿಸಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ನಲ್ಲಿ ಪ್ರತ್ಯೇಕ ಕೋಟಾ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆಗಸ್ಟ್ 31ರ ಬಳಿಕ ಒಂದು ತಿಂಗಳು ಸಿದ್ಧತೆಗೆ ಅವಕಾಶ ನೀಡಿ ನೀಟ್ ಪರೀಕ್ಷೆ ನಡೆಸಲಾಗುವುದು. ಅಷ್ಟಕ್ಕೂ ನೀಟ್ ಪರೀಕ್ಷೆ ರದ್ದುಪಡಿಸಲಾಗಿಲ್ಲ, ಕೋವಿಡ್ ಹಿನ್ನೆಲೆ ಮುಂದೂಡಲಾಗಿದೆ ಎಂದು ವಿವರಿಸಿದರು.