ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂಬುದಾಗಿ ಹೈಕೋರ್ಟ್ನ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಹಲವು ಹೆಸರುಗಳನ್ನು ತೆಗೆದುಹಾಕಿದ್ದು, ಸೇರ್ಪಡೆಗೆ ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸ್ಥಳೀಯ ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ರದ್ದುಪಡಿಸಿತು. ಇದನ್ನು ಪ್ರಶ್ನಿಸಿ ಅವರು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜಿಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ, ಮೇಲ್ಮನವಿ ಅರ್ಜಿ ವಜಾಗೊಳಿಸಿದ್ದು, ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಫಣೀಂದ್ರ, ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ತೆಗೆದುಹಾಕುವುದಕ್ಕೂ ಮುನ್ನ ಎಲ್ಲ ಪ್ರಕ್ರಿಯೆಗಳನ್ನು ನಿಯಮಗಳ ಪ್ರಕಾರ ನಡೆಸಿದೆ ಎಂದರು.
ಈ ಸಂಬಂಧ ಹೆಸರು ತೆಗೆಯುವುದಕ್ಕೂ ಮುನ್ನ ನೋಟಿಸ್ ನೀಡಿದೆ. ಜತೆಗೆ ಪತ್ರಿಕೆಗಳನ್ನು ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸುವುದಕ್ಕಾಗಿ ಕಾಲಾವಕಾಶ ನೀಡಿದೆ. ನಂತರ ಯಾವುದೇ ಪ್ರತಿಕ್ರಿಯೆ ಬಾರದ ಮತದಾರರ ಹೆಸರುಗಳನ್ನು ಮಾತ್ರ ಪಟ್ಟಿಯಿಂದ ತೆಗೆದು ಹಾಕಿದೆ. ಅಲ್ಲದೆ, ಮತದಾರರ ಪಟ್ಟಿಯಿಂದ ಹೆಸರು ಇಲ್ಲದ ವ್ಯಕ್ತಿಗಳು ಮಾತ್ರ ಈ ರೀತಿಯ ಪ್ರಕರಣಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೆ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿದವರ ಪರವಾಗಿ ಮತ್ತೊಬ್ಬರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಅರ್ಜಿ ವಜಾಮಾಡಬೇಕು ಎಂದು ಮನವಿ ಮಾಡಿದರು.