ಬೆಂಗಳೂರು: ಇದೇ ಮೇ 10 ರಂದು ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ವಿಶ್ವದ ವಿವಿಧ ದೇಶಗಳಲ್ಲಿ ನೆಲೆಸಿರುವವರಿಗೆ ಅಲ್ಲಿಂದಲೇ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಸಾಗರೋತ್ತರ ಅನಿವಾಸಿ ಭಾರತೀಯ(ಎನ್‌ಆರ್‌ಐ)ರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ರದ್ದಗೊಳಿಸಿದೆ. ಸಾಗರೋತ್ತರ ಕನ್ನಡಿಗರು ಸಂಘದ ಜಂಟಿ ಕಾರ್ಯದರ್ಶಿ ಮತ್ತು 2008ರಿಂದ ಸೌದಿ ಅರೇಬಿಯಾದಲ್ಲಿ ಶುಶ್ರೂಷಕರಾಗಿ ಸೇವೆ ಸಲ್ಲಿಸುತ್ತಿರುವ ಎಂ ರವಿ ಎಂಬುವರು, ಚುನಾವಣೆಗೆ ಭಾರತೀಯ ರಾಯಭಾರ ಕಚೇರಿಗಳಲ್ಲಿ ಮತಗಟ್ಟೆ ತೆರೆಯುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ವಿಜಯ್‌ಕುಮಾರ್ ಎ ಪಾಟೀಲ್ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವರು ದೀರ್ಘಕಾಲದ ಚುನಾವಣಾ ನ್ಯಾಯಶಾಸ್ತ್ರಕ್ಕೆ ವಿರುದ್ಧವಾಗಿದೆ. ಹೀಗಾಗಿ ಅರ್ಜಿಯನ್ನು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.
ವಿಚಾರಣೆ ವೇಳೆ ಹಾಜರಿದ್ದ ಕೇಂದ್ರ ಚುನಾವಣಾ ಆಯೋಗದ ಪರ ವಕೀಲರು, ಮತದಾನ ಒಂದು ಮೂಲಭೂತ ಹಕ್ಕಲ್ಲ. ಅದು ಕಾನೂನಿನ ಜೀವವಾಗಿದೆ. ಹೀಗಾಗಿ ಇದೊಂದು ಕಾನೂನಾಗಿದೆ. ಇದನ್ನು ಹಕ್ಕಾಗಿ ಪರಿಗಣಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಶ್ವದ ವಿವಿಧ ದೇಶಗಳಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಮಂದಿ ಭಾರತೀಯರು ನೆಲೆಸಿದ್ದಾರೆ. ಫಿಲಫೈನ್ಸ್, ಇಟಲಿಯಂತಹ ದೇಶಗಳು ತಮ್ಮ ಅನಿವಾಸಿ ನಿವಾಸಿಗರಿಗೆ ಮತದಾನದ ಹಕ್ಕನ್ನು ನೀಡಿದೆ. ಅದೇ ರೀತಿಯಲ್ಲಿ ಭಾರತೀಯರಿಗೂ ಅವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.