ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹುಸೈನ್‌ಪುರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ಪೂಜಿಸುವ ದರ್ಗಾದಿಂದ ನೂರು ಮೀಟರ್ ದೂರದಲ್ಲಿ ಮದ್ಯದಂಗಡಿಗೆ ನೀಡಿರುವ ಪರವಾನಗಿ ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಬಾಲಾಜಿ ಎಂಬವರು ಸೇರಿದಂತೆ ಹುಸೈನ್‌ಪುರ ಗ್ರಾಮದ ಮೂವರು ನಿವಾಸಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಹುಸೈನ್‌ಪುರ ಗ್ರಾಮದ ದರ್ಗಾದಿಂದ ಕೇವಲ ನೂರು ಮೀಟರ್ ಅಂತರದಲ್ಲಿ ಅನ್ನಪೂರ್ಣ ಬಾರ್ ಮತ್ತು ರೆಸ್ಟೋರೆಂಟ್ ನಡೆಸಲಾಗುತ್ತಿದೆ. ನಿಯಮಗಳನ್ನು ಉಲ್ಲಂಘಿಸಿ ಮದ್ಯದಂಡಗಡಿ ನಡೆಸಲಾಗುತ್ತಿದೆ. ಸ್ಥಳೀಯ ಮನವಿಪತ್ರ ಪರಿಗಣಿಸಿ ಬಾರ್ ಅನ್ನು ಬೇರೊಂದು ಸ್ಥಳಕ್ಕೆ ಸ್ಥಳಾಂತರಿಸಲು ಸರ್ಕಾರಿ ಪ್ರಾಧಿಕಾರಗಳು ಬಯಸಿವೆ ಎಂಬುದಾಗಿ ಅರ್ಜಿದಾರರು ಹೇಳುತ್ತಾರೆ. ಆದರೆ, ಸರ್ಕಾರದ ಸಂಬಂಧಪಟ್ಟ ಇಲಾಖೆ ಅಥವಾ ಸಂಸ್ಥೆ ವಿವಾದಿತ ಸ್ಥಳದ ಸರ್ವೇ ನಡೆಸಿದೆ ಹಾಗೂ ಸ್ಥಳೀಯರ ಮನವಿಯನ್ನು ಸರ್ಕಾರ ಸಂಬಂಧಪಟ್ಟ ಇಲಾಖೆ ಪರಿಗಣಿಸಿದೆ ಎಂಬುದನ್ನು ತೋರಿಸುವ ಯಾವೊಂದು ದಾಖಲೆಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.