ಬೆಂಗಳೂರು: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು 30 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಗಳನ್ನು ವಜಾಗೊಳಿಸಿ, ಅದಕ್ಕೆ ಕಾರಣಗಳನ್ನು ಆದೇಶ ಪ್ರತಿಯಲ್ಲಿ ವಿವರಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಇದೀಗ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಕೋರಿದರು.
ಇದನ್ನೂ ಓದಿ:ಕ್ಷೇತ್ರ ಉಳಿಸಿಕೊಂಡ ವಿನಯ್: ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕುಲಕರ್ಣಿ ಫೈನಲ್
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಅರ್ಜಿದಾರರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಂಶ ಗೊತ್ತಿಲ್ಲವೇ?. ಹೇಗೆ ಟಿಕೆಟ್ ನೀಡಿದರು ಎಂದು ಪ್ರಶ್ನಿಸಿತು. ಅಲ್ಲದೇ, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಹೀಗಿರುವಾಗ ನೀವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದು. ಇಲ್ಲಿ ಏಕೆ ಪ್ರಶ್ನೆ ಮಾಡಿದ್ದೀರಿ ಎಂದು ನ್ಯಾಯಪೀಠ ಪ್ರಶ್ನಿಸಿತು.