ಬೆಂಗಳೂರು :ಕನಕಪುರ-ಬೆಂಗಳೂರು ರಸ್ತೆಯಲ್ಲಿ ವಾಹನ ಸವಾರರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಮುಂದಿನ ಎರಡು ವಾರದಲ್ಲಿ ವಿವರಣೆ ನೀಡುವಂತೆ ಸೂಚನೆ ನೀಡಿದೆ.
ಬೆಂಗಳೂರು-ಕನಕಪುರ ರಸ್ತೆ ವಿಸ್ತರಣೆ ಕುರಿತಂತೆ ಎಸ್ಪಿ ಸಂದೀಪ್ ರಾಜು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ಪೀಠದಲ್ಲಿ ವಿಚಾರಣೆಗೆ ಬಂದಿತ್ತು.
ಈ ವೇಳೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೇಮಕ ಮಾಡಿದ್ದ ಕೋರ್ಟ್ ಕಮಿಷನರ್ ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನ್ಯಾಯಪೀಠ, ದೇಶದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎ) ಪರಿಣಿತಿಯನ್ನು ಹೊಂದಿದೆ. ಆದರೂ ಸುರಕ್ಷತೆಯನ್ನು ಕಡೆಗಣಿಸಿದೆ ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ರಸ್ತೆಯಲ್ಲಿ ಸಂಚರಿಸುವವರಿಗೆ ಸುರಕ್ಷತೆ ಬೇಕಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತು.
ಇದಕ್ಕೂ ಮುನ್ನ ಎನ್ಎಚ್ಎ ಪರ ವಕೀಲರು, ಬೆಂಗಳೂರು- ಕನಕಪುರ ರಸ್ತೆಯನ್ನು ಎರಡು ಪಥಗಳಿಂದ ನಾಲ್ಕು ಪಥಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ. ಈ ಸಂಬಂಧ ಗುತ್ತಿಗೆ ಪಡೆದಿದ್ದ ಕಂಪೆನಿ ಮಧ್ಯದಲ್ಲಿ ಕಾಮಗಾರಿ ಸ್ಥಗಿತಗೊಳಿಸಿತ್ತು. ಇದೀಗ ಮತ್ತೊಂದು ಕಂಪೆನಿಗೆ ಗುತ್ತಿಗೆ ನೀಡಲಾಗಿದ್ದು, ಕಾಮಗಾರಿ ನಡೆಯುತ್ತಿದೆ.