ಬೆಂಗಳೂರು :ಬಂಡೀಪುರ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ನಟ ಗಣೇಶ್ ಕಿಶನ್ ಅವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್ ಕಿಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಜೀವನ ನಡೆಸುವುದಕ್ಕಾಗಿ ಶಾಶ್ವತ ಕಟ್ಟಡ ನಿರ್ಮಾಣ ಮಾಡಬಹುದು ಎಂದು ತಿಳಿಸಿದೆ. ಆದರೆ, ವಾಣಿಜ್ಯ ಬಳಕೆಗೆ ಅವಕಾಶವಿಲ್ಲ. ಅಲ್ಲದೆ, ಅರ್ಜಿದಾರರ ವಾಸದ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಬೇಕು. ಒಂದು ವೇಳೆ ಅಂತಿಮ ಆದೇಶ ನಮ್ಮ ಕಕ್ಷಿದಾರರ ವಿರುದ್ಧ ಬಂದಲ್ಲಿ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ತಿಳಿಸಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದೆ.
ಈ ವೇಳೆ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ತಾತ್ಕಾಲಿಕ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಮಾತ್ರ ಅವಕಾಶವಿದೆ ಎಂದು ಆಕ್ಷೇಪಿಸಿದರು. ಇದಕ್ಕೆ ಪೀಠ, ಹಾಗಾದರೆ ಬೇರೆಯವರಿಗೆ ಕಟ್ಟಡ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹೇಗೆ ಅನುಮತಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಹೊಸ ದಾಖಲೆಗಳನ್ನು ನೀಡಿದ್ದಾರೆ. ಮೇಲ್ನೋಟಕ್ಕೆ ಅವೆಲ್ಲವೂ ಹೊಸ ಅನುಮತಿಗಳೇ ಆಗಿವೆ. ಹೀಗಾಗಿ, ಅರ್ಜಿದಾರರಿಗೆ ಕಟ್ಟಡ ನಿರ್ಮಾಣ ಮಾಡಲು ಅನುಮತಿ ಇದೆ ಎಂದು ತಿಳಿಸಿತು.