ಬೆಂಗಳೂರು : ಕನಿಷ್ಠ ವೇತನ ಸಿಗದೆ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕುರಿತು ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕೊರೊನಾ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ. ಎ.ಎಸ್ ಓಕ್ ಹಾಗೂ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ಡಿ. ರೋಜಾರಿಯೋ ವಾದಿಸಿ, ನಿಮ್ಹಾನ್ಸ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಪಿಪಿಇ ಕಿಟ್, ಫೇಸ್ ಶೀಲ್ಡ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಅಗತ್ಯ ಸುರಕ್ಷತಾ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಹೀಗಾಗಿಯೇ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಮುಖ್ಯವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರದ ಸಿಬ್ಬಂದಿಗೆ ಕನಿಷ್ಠ ವೇತನವನ್ನು ನೀಡುತ್ತಿಲ್ಲ. ಇವರಿಗೆ ಕೇವಲ 7,300 ರೂ. ಕೊಡಲಾಗುತ್ತಿದೆ ಎಂದು ವಿವರಿಸಿದರು.
ವಕೀಲರ ಹೇಳಿಕೆ ದಾಖಲಿಸಿಕೊಂಡು, ಪೀಠ ಗುತ್ತಿಗೆ ಕಾರ್ಮಿಕರ ಪರಿಸ್ಥಿತಿಗೆ ಬೇಸರ ವ್ಯಕ್ತಪಡಿಸಿತು. ಅಲ್ಲದೇ ನಿಮ್ಹಾನ್ಸ್ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಪರ ವಕೀಲರಿಗೆ ಸೂಚನೆ ನೀಡಿದ ಪೀಠ, ಈ ಕುರಿತು ಸ್ಪಷ್ಟನೆ ನೀಡಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿತು. ಹಾಗೆಯೇ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗೆ ಕನಿಷ್ಠ ವೇತನವೂ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಉಪ ಆಯುಕ್ತರು ಪರಿಶೀಲಿಸಿ ವರದಿ ನೀಡುವಂತೆ ಹಾಗೂ ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜುರುಗಿಸುವಂತೆ ನಿರ್ದೇಶಿಸಿತು.
ಇದಕ್ಕೂ ಮುನ್ನ ನಿಮ್ಹಾನ್ಸ್ ಪರ ವಕೀಲರು ವಾದಿಸಿ, ನಿಮ್ಹಾನ್ಸ್ ಕೋವಿಡ್ ಆಸ್ಪತ್ರೆಯಲ್ಲ. ಹಾಗಿದ್ದು ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಕೋರಿ ಬರುವ ರೋಗಿಗಳಿಗೆ ಕೊರೊನಾ ಇದ್ದಲ್ಲಿ ಅವರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ನಾಲ್ಕು ರೋಗಿಗಳಷ್ಟೇ ಆಸ್ಪತ್ರೆಯಲ್ಲಿದ್ದು, ಅವರಿಗೆ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇನ್ನು ಗುತ್ತಿಗೆ ಸಿಬ್ಬಂದಿಗೆ ಸೂಕ್ತ ವೇತನವನ್ನು ಗುತ್ತಿಗೆದಾರರ ಮೂಲಕ ನೀಡಲಾಗುತ್ತಿದೆ. ಆಸ್ಪತ್ರೆ ಸಿಬ್ಬಂದಿಗೆ ಸುರಕ್ಷತಾ ಕ್ರಮವಾಗಿ 13 ಸಾವಿರ ಪಿಪಿಇ ಕಿಟ್, 22 ಸಾವಿರ ಎನ್-95 ಮಾಸ್ಕ್ ಹಾಗೂ ಫೇಸ್ ಶೀಲ್ಡ್ ನೀಡಲಾಗಿದೆ ಎಂದರು.
ಇನ್ನು ವಿಕ್ಟೋರಿಯಾ ಆಸ್ಪತ್ರೆ ಪರ ವಕೀಲರು ಅರ್ಜಿಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಕಾಲಾವಕಾಶ ನೀಡಿದ ಪೀಠ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿತು.