ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಅಕ್ರಮ ಕುರಿತು ತನಿಖೆ ನಡೆಸಲು ನಾಲ್ಕು ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತು. ಸರ್ಕಾರದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ ಸೇರಿದಂತೆ 17 ಗುತ್ತಿಗೆ ಕಂಪನಿಗಳು ಮತ್ತು 28 ಮಂದಿ ಗುತ್ತಿಗೆದಾರರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ನ್ಯಾಯಪೀಠ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಸಮಿತಿ ರಚನೆ ಮಾಡಿರುವ ಸರ್ಕಾರದ ನಿಲುವು ಕುರಿತಂತೆ ರಾಜ್ಯ ಸರ್ಕಾರ ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಕರಣದ ಹಿನ್ನೆಲೆ:ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ ಮತ್ತು ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಹಲವು ಕಾಮಗಾರಿಗಳು ನಡೆದಿದ್ದವು. ಕಾಮಗಾರಿಗಳ ಸಂಬಂಧ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್ ಪಾವತಿ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿರುವುದು ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದವು. ಇದರಿಂದ ಆ ಕುರಿತು ತನಿಖೆ ನಡೆಸಲು ರಾಜ್ಯ ನಗರಾಭಿವೃದ್ಧಿ ಇಲಾಖೆಯು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ನಾಲ್ಕು ಸಮಿತಿ ರಚನೆ ಮಾಡಲಾಗಿತ್ತು.