ಬೆಂಗಳೂರು :ತೋಟದಲ್ಲಿ ಕೃಷಿ ಸಾಮಾಗ್ರಿ ಕಳ್ಳತನ ಮಾಡುತ್ತಿದ್ದ ಕಳ್ಳರ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ತುಮಕೂರಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಪಿ.ವಿ ರಂಗಸ್ವಾಮಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪಿ.ವಿ ರಂಗಸ್ವಾಮಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಅಲ್ಲದೆ, 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯನಾಶಕ್ಕೆ ಯತ್ನಿಸಬಾರದು. ವಿಚಾರಣಾ ನ್ಯಾಯಾಲಯದ ಅನುಮತಿ ಪಡೆಯದೇ ತುಮಕೂರು ಜಿಲ್ಲೆ ಬಿಟ್ಟು ತೆರಳಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.
ಪ್ರಕರಣದ ಹಿನ್ನೆಲೆ ಏನು ? :ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆ.ಗಿರೀಶ್ ಮತ್ತು ಪಿ.ಎನ್. ಗಿರೀಶ್ ಎಂಬುವವರು ಹಳ್ಳಿಯ ತೋಟಗಳಿಂದ ಅಡಿಕೆ ಗೊನೆ, ಪಂಪ್ ಸೆಟ್ ಮೋಟರ್, ಸ್ಟಾರ್ಟರ್ ಮುಂತಾದವುಗಳನ್ನು ಕಳ್ಳತನ ಮಾಡುತ್ತಿದ್ದರು. ಊರಿನ ಜನರು ಕಳ್ಳತನ ಮಾಡುವವರನ್ನು ಹಿಡಿದು ಬುದ್ದಿ ಕಲಿಸಲು ಕಾಯುತ್ತಿದ್ದರು.