ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಮಾಡಾಳ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ ಆದ ಎಂ.ವಿ. ಪ್ರಶಾಂತ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಈ ಆದೇಶ ಮಾಡಿದೆ.
ಪ್ರಕರಣದಲ್ಲಿ ದೂರುದಾರ ಶ್ರೇಯಾಸ್ ಕಶ್ಯಪ್ ನಿರ್ದೇಶಕರಾಗಿರುವ ಮೆರ್ಸೆಸ್ ಡಿಲಿಸಿಯಾ ಕೆಮಿಕಲ್ಸ್ ಕಂಪನಿಯಿಂದ ಕೆಮಿಕಲ್ ಆಯಿಲ್ ಖರೀದಿಯ ಕುರಿತ ಕೆಎಸ್‌ಡಿಎಲ್ ಟೆಂಡರ್ ಕಾರ್ಯಾದೇಶ ನೀಡಲು ಪ್ರತಿಯಾಗಿ 40 ಲಕ್ಷ ಲಂಚ ಪಡೆದಿದ್ದಾರೆ ಎಂಬ ಆರೋಪ ಪ್ರಶಾಂತ್ ವಿರುದ್ಧ ಇದೆ. ಇದೇ ಆರೋಪ ಸಂಬಂಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಾರ್ಚ್ 2ರಂದು ಎಫ್‌ಐಆರ್ ದಾಖಲಿಸಿದ್ದರು. ಲಂಚದ ಹಣ ಸ್ವೀಕರಿಸುವಾಗಲೇ ಪ್ರಶಾಂತ್ ಅವರನ್ನು ವಶಕ್ಕೆ ಬಂಧಿಸಿದ್ದರು.
ಮಾಡಾಳ್ ಪ್ರಶಾಂತ ಪ್ರಕರಣದಲ್ಲಿ ಷರತ್ತುಗಳು ಹೀಗಿದೆ :ಅರ್ಜಿದಾರ ಐದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಇದೇ ಮಾದರಿ ಪ್ರಕರಣದಲ್ಲಿ ಮತ್ತೆ ಭಾಗಿಯಾಗಬಾರದು. ಪ್ರಕರಣದ ಸಾಕ್ಷ್ಯಾಧಾರ ನಾಶಪಡಿಸಲು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು. ಪೂರ್ವಾನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು. ಪಾರ್ಸ್‌ಪೋರ್ಟ್ ಅನ್ನು ತನಿಖಾಧಿಕಾರಿಯ ಸುಪರ್ದಿಗೆ ನೀಡಬೇಕು ಎಂದು ಜಾಮೀನು ಮಂಜೂರಾತಿ ವೇಳೆ ಹೈಕೋರ್ಟ್ ಷರತ್ತು ವಿಧಿಸಿದೆ.
ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಅವರ ಪುತ್ರ ಪ್ರಶಾಂತ್ ಮಾಡಾಳ್ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಜಾಮೀನು ನೀಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದರಿಂದ ಪ್ರಶಾಂತ್ ಹೈಕೋರ್ಟ್ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಮಾರ್ಚ್ 27ರಂದು ಲೋಕಾಯುಕ್ತ ಪ್ರಕರಣದಿಂದ ಬಂಧನಕ್ಕೆ ಗುರಿಯಾಗಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರಿಗೆ ವಿಚಾರಣಾ ನ್ಯಾಯಾಲಯ ಏಪ್ರಿಲ್ 15ರಂದು ಜಾಮೀನು ಮಂಜೂರು ಮಾಡಿತ್ತು.
ಇದನ್ನೂ ಓದಿ:ಲಂಚ ಪ್ರಕರಣ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು