ಕರ್ನಾಟಕ

karnataka

ETV Bharat / state

ತೃತೀಯ ಲಿಂಗಿಗಳಿಗೆ ಸರ್ಕಾರಿ ಪ್ರಾಧಿಕಾರಗಳ ನೇಮಕಾತಿಯಲ್ಲೂ ಮೀಸಲು: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್ - transgender

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಅರ್ಜಿಯಲ್ಲಿ ನಿಗಮ - ಮಂಡಳಿಗಳನ್ನು ಪ್ರತಿವಾದಿ ಮಾಡಿಲ್ಲ. ಹೀಗಾಗಿ, ಅರ್ಜಿದಾರರು ಎಲ್ಲ ನಿಗಮ-ಮಂಡಳಿಗಳನ್ನು ಅರ್ಜಿಯಲ್ಲಿ ಪ್ರತಿವಾದಿಯಾಗಿ ಸೇರಿಸಲಿ. ಬಳಿಕ ಅವುಗಳಿಗೆ ನೋಟಿಸ್ ಜಾರಿ ಮಾಡಿ, ವಾದ ಆಲಿಸಿ ನಿರ್ಣಯಿಸಬೇಕಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು.

ತೃತೀಯ ಲಿಂಗಿಗಳಿಗೆ ಸರ್ಕಾರಿ ಪ್ರಾಧಿಕಾರಗಳ ನೇಮಕಾತಿಯಲ್ಲೂ ಮೀಸಲು
ತೃತೀಯ ಲಿಂಗಿಗಳಿಗೆ ಸರ್ಕಾರಿ ಪ್ರಾಧಿಕಾರಗಳ ನೇಮಕಾತಿಯಲ್ಲೂ ಮೀಸಲು

By

Published : Aug 18, 2021, 7:38 PM IST

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲು ಕಲ್ಪಿಸುವ ವಿಚಾರವಾಗಿ ಸರ್ಕಾರಿ ಸ್ವಾಮ್ಯದ ನಿಗಮ - ಮಂಡಳಿಗಳು, ಶಾಸನಬದ್ಧ ಪ್ರಾಧಿಕಾರಗಳು ಮತ್ತು ಸಂಸ್ಥೆಗಳಿಗೆ ಸೂಚನೆ ನೀಡುವ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಲೈಂಗಿಕ ಅಲ್ಪಸಂಖ್ಯಾತ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಸಂಗಮ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಅರ್ಜಿದಾರರ ಪರ ವಾದಿಸಿದ ವಕೀಲರು, ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಕಲ್ಪಿಸಿರುವ ಶೇ.1ರಷ್ಟು ಸಮತಲ ಮೀಸಲು ಸೌಲಭ್ಯವನ್ನು ಸರ್ಕಾರಿ ಸ್ವಾಮ್ಯದ ಎಲ್ಲ ನಿಗಮ - ಮಂಡಳಿಗಳಿಗೂ ಅನ್ವಯವಾಗುವಂತೆ ನಿರ್ದೇಶಿಸಬೇಕು ಎಂದು ಕೋರಿದರು.

ಇದಕ್ಕೆ ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಅರ್ಜಿಯಲ್ಲಿ ನಿಗಮ - ಮಂಡಳಿಗಳನ್ನು ಪ್ರತಿವಾದಿ ಮಾಡಿಲ್ಲ. ಹೀಗಾಗಿ, ಅರ್ಜಿದಾರರು ಎಲ್ಲ ನಿಗಮ - ಮಂಡಳಿಗಳನ್ನು ಅರ್ಜಿಯಲ್ಲಿ ಪ್ರತಿವಾದಿಯಾಗಿ ಸೇರಿಸಲಿ. ಬಳಿಕ ಅವುಗಳಿಗೆ ನೋಟಿಸ್ ಜಾರಿ ಮಾಡಿ, ವಾದ ಆಲಿಸಿ ನಿರ್ಣಯಿಸಬೇಕಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನಿಗಮ - ಮಂಡಳಿಗಳನ್ನು ಪ್ರತಿವಾದಿಯಾಗಿ ಸೇರಿಸುವುದು ಅರ್ಜಿದಾರರಿಗೆ ಬಿಟ್ಟ ವಿಚಾರ. ಆದರೆ, ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ) ಸೇರ್ಪಡೆಗೊಳಿಸುವ ಮೂಲಕ ಶೇ.1ರಷ್ಟು ಸಮತಲ ಮೀಸಲು ಕಲ್ಪಿಸಿರುವುದು ಉತ್ತಮ ಕಾರ್ಯ.

ಅದರಂತೆ ಸರ್ಕಾರಿ ಸ್ವಾಮ್ಯದ ನಿಗಮ - ಮಂಡಳಿಗಳಿಗೂ ಈ ಕುರಿತು ಸೂಕ್ತ ನಿರ್ದೇಶನ ನೀಡುವ ಕುರಿತು ಪರಿಗಣಿಸಬಹುದು. ಈ ಕುರಿತು ಸರ್ಕಾರ 6 ವಾರಗಳಲ್ಲಿ ನಿಲುವು ತಿಳಿಸಲಿ ಎಂದು ಸೂಚಿಸಿ ವಿಚಾರಣೆಯನ್ನು ಸೆ.22ಕ್ಕೆ ಮುಂದೂಡಿತು.

ABOUT THE AUTHOR

...view details