ಕರ್ನಾಟಕ

karnataka

ETV Bharat / state

ಪದವಿ ಕಾಲೇಜುಗಳಲ್ಲಿ ಕಡ್ಡಾಯ ಕನ್ನಡ ಕಲಿಕೆ: ಜನವರಿ 31ಕ್ಕೆ ವಿಚಾರಣೆ

ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಭಾಷೆ ಕಲಿಯುವುದಕ್ಕೆ ನಿರ್ಬಂಧ ವಿಧಿಸಬಾರದು ಎಂದು ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು ಎಂದು ಸಂಸ್ಕೃತ ಭಾರತಿ ಟ್ರಸ್ಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಎಸ್ ನಾಗಾನಂದ್ ತಿಳಿಸಿದ್ದಾರೆ.

high-court
ಹೈಕೋರ್ಟ್

By

Published : Jan 20, 2022, 7:28 PM IST

ಬೆಂಗಳೂರು:ಪದವಿ ತರಗತಿಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ ಜನವರಿ 31ಕ್ಕೆ ಮುಂದೂಡಿದೆ.

ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ ಟ್ರಸ್ಟ್, ಸಂಸ್ಕೃತ ಪ್ರಾಧ್ಯಾಪಕ ಸಂಘ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆ ಅಧ್ಯಯನ ಮುಂದುವರೆಸಲು ಸ್ವತಂತ್ರರು ಎಂದು ನಿರ್ದೇಶಿಸಬೇಕು ಎಂದು ಕೋರಿ ಕೆ. ಜಿ ಶಿವಕುಮಾರ್ ಹಾಗು ಇತರೆ ಐವರು ವಿದ್ಯಾರ್ಥಿಗಳು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದ ಮಂಡಿಸಿ, ನಮ್ಮ ಮನವಿಯನ್ನು ಪಿಐಎಲ್ ಆಗಿ ಪರಿವರ್ತಿಸಲಾಗಿದೆ. ಪಿಐಎಲ್ ನಿಯಮಗಳ ಅನುಸಾರ ವಿವರಗಳನ್ನು ಸಲ್ಲಿಸಲಾಗಿದೆ ಎಂದರು. ಅಲ್ಲದೇ, ಪದವಿ ತರಗತಿಗಳ ಸೆಮಿಸ್ಟರ್ ಪರೀಕ್ಷೆಗಳು ಫೆಬ್ರವರಿ 15ರಿಂದ ಆರಂಭವಾಗಲಿವೆ. ಆದ್ದರಿಂದ, ಅರ್ಜಿಯ ಅಂತಿಮ ವಿಚಾರಣೆಯನ್ನು ಶೀಘ್ರವಾಗಿ ನಡೆಸಬೇಕು ಎಂದು ಕೋರಿದರು.

ಸಂಸ್ಕೃತ ಭಾರತಿ ಟ್ರಸ್ಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಎಸ್ ನಾಗಾನಂದ್, ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಭಾಷೆ ಕಲಿಯುವುದಕ್ಕೆ ನಿರ್ಬಂಧ ವಿಧಿಸಬಾರದು ಎಂದು ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಅಲ್ಲದೇ, ಕನ್ನಡ ಕಲಿಯಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಕಲಿಯುವಂತೆ ಒತ್ತಾಯಿಸಬಾರದು ಎಂದು ನಿರ್ದೇಶಿಸಿತ್ತು. ಆದರೆ, ಸರ್ಕಾರ ಈ ಕುರಿತು ವಿಶ್ವವಿದ್ಯಾಲಯಗಳಿಗೆ ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ, ಭಾಷೆ ಕಲಿಕೆ ವಿಚಾರದಲ್ಲಿ ವಿದ್ಯಾರ್ಥಿಗಳಲ್ಲಿ ಗೊಂದಲ ಮುಂದುವರೆದಿದೆ ಎಂದರು.

ವಾದ-ಪ್ರತಿವಾದ ಆಲಿಸಿದ ಪೀಠ, ಈ ಬಗ್ಗೆ ವಿಸ್ತೃತ ವಿಚಾರಣೆಯ ಅಗತ್ಯವಿದೆ. ಎಲ್ಲರ ವಾದ ಆಲಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಜನವರಿ 31ಕ್ಕೆ ಮುಂದೂಡಿತು. ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಯುವಂತೆ ಒತ್ತಾಯಿಸುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ನೀತಿಗೆ ಆಕ್ಷೇಪಿಸಿದ್ದ ಹೈಕೋರ್ಟ್, ಕನ್ನಡ ಕಲಿಕೆ ಕಡ್ಡಾಯಗೊಳಿಸಲು ಮುಂದಾಗಬಾರದು ಎಂದು ಸೂಚಿಸಿತ್ತು. ಅಲ್ಲದೇ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಕಲಿಕೆ ಕಡ್ಡಾಯದ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ABOUT THE AUTHOR

...view details