ಬೆಂಗಳೂರು:ಮೈಸೂರಿನ ಗನ್ ಹೌಸ್ ಸರ್ಕಲ್ನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮಿ ಪುತ್ಥಳಿ ಅನಧಿಕೃತವಾಗಿ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಅರ್ಜಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲವು ಸರ್ಕಾರ ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಮೈಸೂರಿನ ಗಿರಿಯಾ ಭೋವಿ ಪಾಳ್ಯದ ನಿವಾಸಿ ಸುಬ್ರಹ್ಮಣ್ಯ ಮತ್ತು ಕುರುಬರಹಳ್ಳಿ ನಿವಾಸಿ ಎನ್. ಶೀಲಾವತಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ನಡೆಸಿತು. ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮೈಸೂರು ಜಿಲ್ಲಾಧಿಕಾರಿ, ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ನಗರ ಪೊಲೀಸ್ ಆಯುಕ್ತರು ಮತ್ತು ಮೈಸೂರು ವಿಭಾಗದ ಲೋಕೋಪಯೋಗಿ ಇಲಾಖೆ ಕಾರ್ಯಕಾರಿ ಎಂಜಿನಿಯರ್ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅಲ್ಲದೇ ಅರ್ಜಿ ಕುರಿತು ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳಿಂದ ಅಗತ್ಯ ಮಾಹಿತಿ ಪಡೆದು ಮುಂದಿನ ಎರಡು ವಾರದಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು. ಇದೇ ವೇಳೆ ಪ್ರತಿಮೆ ಅನಾವರಣ ಕಾರ್ಯಕ್ರಮ ಜ.4ರಂದು ನಡೆಯಲಿದ್ದು, ಅದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ತಿರಸ್ಕರಿಸಿದೆ. ಅನಾವರಣ ಕಾರ್ಯಕ್ರಮ ನಿಗದಿಯಾಗಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಮಧ್ಯಂತರ ಮನವಿ ಪರಿಗಣಿಸಲಾಗದು ಎಂದು ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಸ್ಥಳಗಳಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಪ್ರತಿಮೆಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ, ವೃತ್ತಗಳಲ್ಲಿ ಪ್ರತಿಮೆ ಸ್ಥಾಪಿಸಬಾರದು ಎಂಬುದೇನಿಲ್ಲ. ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ವೃತ್ತಗಳಲ್ಲಿ ಪ್ರತಿಮೆ ಸ್ಥಾಪಿಸಬಹುದಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಕ್ರಮವಾಗಿಯೇ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಹೈಕೋರ್ಟ್ ಅನುಮತಿ ನೀಡಿದ ನಂತರವೇ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಹಾಗಾಗಿ ಅರ್ಜಿಯನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.