ಬೆಂಗಳೂರು :ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತರಿಗೆ ಪರಿಹಾರ ನೀಡಲು ಕಷ್ಟಸಾಧ್ಯ ಎಂಬ ನಿಲುವನ್ನು ಪುನಃ ಪರಿಶೀಲಿಸುವಂತೆ ಈ ಹಿಂದೆ ನೀಡಿರುವ ನಿರ್ದೇಶನಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ವಿಮೆ ಸಿಗದಿರುವ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರ ತಾಲೂಕಿನ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ಫೆ.26ರಂದು ಕೃಷಿ ಇಲಾಖೆ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಆದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ಮೃತಪಟ್ಟಿರುವ ರೈತರಿಗೆ ಸರ್ಕಾರದಿಂದ ಸಿಗುವ ಈ ಪರಿಹಾರ ಸಾಧ್ಯವಿಲ್ಲ ಎಂದು ತಿಳಿಸಿದ್ದರು.