ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - etv bharat kannada

ರಾಜ್ಯದಲ್ಲಿ ಬೇಚರಾಕ್ ಗ್ರಾಮಗಳ ಪಟ್ಟಿ ಸಲ್ಲಿಸುವಂತೆ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Etv Bharatgovernment to submit list of uninhabited villages
ರಾಜ್ಯದಲ್ಲಿ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

By

Published : Feb 28, 2023, 9:31 PM IST

ಬೆಂಗಳೂರು: ರಾಜ್ಯದಲ್ಲಿರುವ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸುವಂತೆ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಈ ಆದೇಶ ಜಾರಿಯಾಗದ ಹಿನ್ನೆಲೆಯಲ್ಲಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶವ ಸಂಸ್ಕಾರಕ್ಕೆ ಸ್ಥಳಾವಕಾಶ ಇಲ್ಲದ ಗ್ರಾಮಗಳಿಗೆ ಭೂಮಿ ಒದಗಿಸಿರುವ ಸಂಬಂಧ ಸರ್ಕಾರ ಸಲ್ಲಿಸಿದ ವರದಿಯನ್ನು ಪರಿಶೀಲನೆ ನಡೆಸಿ ವಸ್ತುಸ್ಥಿತಿ ಮಾಹಿತಿಯನ್ನು ಒದಗಿಸುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿತ್ತು.

ಸರ್ಕಾರ ಸಲ್ಲಿಸಿದ್ದ ವರದಿಯ ಅಂಕಿ-ಅಂಶಗಳಿಗೂ ಮತ್ತು ಪ್ರಾಧಿಕಾರ ಸಂಗ್ರಹಿಸಿದ ಮಾಹಿತಿಗೂ ವ್ಯತ್ಯಾಸವಿದೆ. ರಾಜ್ಯದಲ್ಲಿ ಒಟ್ಟು 29,616 ಗ್ರಾಮಗಳಿದ್ದು, ಅದರಲ್ಲಿ 1,394 ‘ಬೇಚರಾಕ್’ (ಜನವಸತಿ ಇಲ್ಲದ ಗ್ರಾಮಗಳು)ಗ್ರಾಮಗಳಿವೆ ಎಂದು ಸರ್ಕಾರ ಹೇಳಿದೆ. ಸರ್ಕಾರದ ವರದಿಯಲ್ಲಿ ಗ್ರಾಮಗಳ ಸಂಖ್ಯೆ ಹೇಳಲಾಗಿದೆಯೇ ಹೊರತು ಬೇಚರಾಕ್ ಗ್ರಾಮಗಳ ಪಟ್ಟಿ ಇಲ್ಲ ಎಂದು ಪ್ರಾಧಿಕಾರ ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಅದರಂತೆ, ವಿಚಾರಣೆ ವೇಳೆಯೂ ಪ್ರಾಧಿಕಾರದ ಪರ ವಕೀಲರು ಈ ವಿಷಯವನ್ನು ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು ಬೇಚರಾಕ್ ಗ್ರಾಮಗಳ ಪಟ್ಟಿ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಒಂದು ವಾರ ಮುಂದೂಡಿತು.
ಕಳೆದ ಜ.10ರಂದು ಅರ್ಜಿ ವಿಚಾರಣೆಗೆ ಬಂದಿದ್ದಾಗ ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,903 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನು ಒದಗಿಸಲಾಗಿದೆ. 319 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಬೇಕಾಗಿದೆ. 56 ಗ್ರಾಮಗಳಲ್ಲಿ ಆಗಿರುವ ಸ್ಮಶಾನ ಜಾಗದ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟು 1,394 ಗ್ರಾಮಗಳು ಬೇಚರಾಕ್ (ಅಧಿಕೃತವಾಗಿ ಕಂದಾಯ ಸ್ಥಾನಮಾನ ಮತ್ತು ಜನ ವಸತಿ ಇಲ್ಲದ) ಗ್ರಾಮಗಳಾಗಿವೆ ಎಂದು ವಿವರಿಸಿತ್ತು.

ಇದನ್ನೂ ಓದಿ:ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕ್ರಮ: ನಿರ್ಣಯ ಹಿಂಪಡೆದ ಮಂಡ್ಯ ವಕೀಲರ ಸಂಘ

ABOUT THE AUTHOR

...view details