ಬೆಂಗಳೂರು:ಯುವತಿಯೊಬ್ಬಳ ವಿವಾಹಕ್ಕೆ ರೌಡಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮೇ 9 ಮತ್ತು 10ರಂದು ನಡೆಯುಲಿರುವ ಕಾರ್ಯಕ್ರಮಕ್ಕೆ ಭದ್ರತೆ ಕಲ್ಪಿಸುವಂತೆ ಕೆಂಗೇರಿ ಠಾಣಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ತನ್ನ ಮದುವೆಗೆ ಭದ್ರತೆ ಕಲ್ಪಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ನಗರದ ಯುವತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರ ಪೀಠ ಈ ಆದೇಶ ನೀಡಿದೆ.
ಅರ್ಜಿದಾರೆಯ ಮದುವೆ ನಗರದ ಖಾಸಗಿ ಹೋಟೆಲ್ವೊಂದರಲ್ಲಿ ಮೇ 9 ಮತ್ತು 10ರಂದು ನಡೆಯಲಿದೆ. ತಂದೆಯ ವ್ಯಾಪಾರದಲ್ಲಿ ಪಾಲುದಾರನಾದ ಕೆ.ಶಿವರಾಜ್ ಗೌಡ ಎಂಬುವರು ಹಣಕಾಸು ವಿವಾದವನ್ನು ಮುಂದಿಟ್ಟುಕೊಂಡು ತನ್ನ ಮದುವೆ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಹೀಗಾಗಿ ಮದುವೆ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸುವುದಾಗಿ ಕೆಂಗೇರಿ ಠಾಣೆಯ ಪೊಲೀಸ್ ಇನಸ್ಪೆಕ್ಟರ್ ಭರವಸೆ ನೀಡಿದ್ದಾರೆ. ಅದರಂತೆ ಇನಸ್ಪೆಕ್ಟರ್ ತಮ್ಮ ಭರವಸೆಗೆ ಬದ್ಧವಾಗಿರಬೇಕು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರೆಯ ಪರ ವಕೀಲ ಡಿ.ಮೋಹನ್ ಕುಮಾರ್, ಶಿವರಾಜ್ ಗೌಡ ಅವರು 2014ರಿಂದ ಅರ್ಜಿದಾರೆಯ ತಂದೆ ಜೊತೆಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಹಣಕಾಸು ವಿಚಾರವಾಗಿ ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದರಿಂದ ಶಿವರಾಜ್ ಗೌಡ, ಅರ್ಜಿದಾರೆಯ ಮನೆಗೆ ಬಂದು ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಸಾಲದೇ, ಅರ್ಜಿದಾರೆಯ ನಕಲಿ ಫೋಟೋಗಳನ್ನು ವರನ ಕಡೆಯವರಿಗೆ ತೋರಿಸಿ ಮದುವೆ ನಿಲ್ಲಿಸಲಾಗುವುದು ಮತ್ತು ಕಲ್ಯಾಣ ಮಂಟಪದಿಂದಲೇ ಅರ್ಜಿದಾರೆಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ.