ಬೆಂಗಳೂರು :2020ರ ಸೆಪ್ಟಂಬರ್ 16ರ ನಂತರದಲ್ಲಿ ರಾಜ್ಯದ ವಿಶೇಷ ನ್ಯಾಯಾಲಯದಲ್ಲಿ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿ ವಿಚಾರಣಾ ಹಂತದಲ್ಲಿರುವ ಹಾಗೂ ಸರ್ಕಾರ ಹಿಂಪಡೆದಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮುಂದಿನ ಮೂರು ವಾರಗಳಲ್ಲಿ ಮಾಹಿತಿ ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದೆ.
ಶಾಸಕರು ಹಾಗೂ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಹಾಜರಿದ್ದ ಪ್ರಕರಣದ ಅಮೈಕಾಸ್ ಕ್ಯೂರಿ (ನ್ಯಾಯಾಲಯಕ್ಕೆ ನೆರವಾಗುವವರು) ಆದಿತ್ಯ ಸೋಂದಿ, ಪ್ರಕರಣ ಸಂಬಂಧ ಸಾಕಷ್ಟು ಪ್ರಕರಣಗಳಿದ್ದು, ಸುದೀರ್ಘ ಅಧ್ಯಯನ ನಡೆಸಬೇಕಾದ ಅಗತ್ಯವಿದೆ. ಜೊತೆಗೆ, ಈ ಸಂಬಂಧ ವಿಶೇಷ ನ್ಯಾಯಾಲಯಗಳಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಕಾಲಾವಕಾಶ ನೀಡಬೇಕು ಎಂದು ಕೋರಿದರು.