ಬೆಂಗಳೂರು:ರಾಜಕಾಲುವೆಗಳ ಒತ್ತುವರಿ ಮಾಡಿರುವವರನ್ನು ತೆರವು ಮಾಡುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ್ದ ನಿರ್ದೇಶನಗಳಂತೆ ಸಮಗ್ರವಾದ ನಿಯಮಗಳನ್ನು ಜಾರಿ ಮಾಡದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕೆರೆ ಮತ್ತು ರಾಜಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಿಟಿಜನ್ ಆಕ್ಷನ್ ಗ್ರೂಪ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ರಾಜ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜೊತೆಗೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೇ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ತಿಳಿಸಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಆಗಸ್ಟ್ 1ಕ್ಕೆ ವಿಚಾರಣೆ ಮುಂದೂಡಿಕೆ:ರಾಜಕಾಲುವೆಗಳ ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ವಿವರಿಸಲಾಗಿಲ್ಲ ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿದೆ. ಅಲ್ಲದೆ, ಒತ್ತವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಈವರೆಗೂ ಕೈಗೊಂಡಿರುವ ಕ್ರಮಗಳು ಕೇವಲ ಭಾಗಶಃ ಆಗಿವೆ. ಆದರೆ, ಸಮಗ್ರ ಯೋಜನೆಯನ್ನು ರೂಪಿಸಿಲ್ಲ ಎಂದು ಪೀಠ ತಿಳಿಸಿದೆ.