ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಕಬಳಿಕೆ ಸಂಬಂಧ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿದ ಬಳಿಕ ಕೈಗೊಂಡ ಕ್ರಮ ಹಾಗೂ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಸಿರುವ ವರದಿ ಆಧರಿಸಿ ಬೀದರ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗಳ ಕಬಳಿಕೆ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಸಚಿವ ಎಸ್ ಕೆ ಕಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ಧ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚನೆ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಿಶೇಷ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. ಆದರೆ, ಮುಂದೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ತಿಳಿದಿಲ್ಲ. ಅದೇ ರೀತಿ ಇತ್ತಿಚಿಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಪರಿಷತ್ತಿನಲ್ಲಿ ವರದಿಯನ್ನು ಮಂಡಿಸಲಾಗಿದೆ ಎಂಬ ಮಾಹಿತಿ ಇದೆ.