ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್‌ಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ನಿಯಂತ್ರಿಸಲು ಮಾರ್ಷಲ್‌ಗಳನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಮಾಡಿದೆ.
ಬಿಬಿಎಂಪಿ ನೌಕರರ ಕಲ್ಯಾಣ ಸಂಘ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ , ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, 2017ರ ಏ.26ರಂದು ನಗರದಲ್ಲಿ ಘನ ತ್ಯಾಜ್ಯ ವಿಲೇವಾರಿ ನಿಯಂತ್ರಿಸಲು ವಾರ್ಡ್ ಮಟ್ಟದಲ್ಲಿ ಮಾರ್ಷಲ್‌ಗಳನ್ನು ನೇಮಕ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, 2019ರ ಆ.23 ರಂದು ಬಿಬಿಎಂಪಿ ಘನ ತ್ಯಾಜ್ಯ ವಿಲೇವಾರಿ ವಿಭಾಗದ ಕಾರ್ಯಕಾರಿ ಎಂಜಿನಿಯರ್ ಎಲ್ಲ 198 ವಾರ್ಡ್‌ಗಳಲ್ಲಿ ಮಾರ್ಷ್‌ಲ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕಾರ್ಯಾದೇಶ ನೀಡಿದ್ದಾರೆ. ಘನ ತ್ಯಾಜ್ಯ ವಿಲೇವಾರಿ ಬಗ್ಗೆ ನಿಗಾ ವಹಿಸಬೇಕಾದ ಕರ್ತವ್ಯ ಕಿರಿಯ ಹಾಗೂ ಹಿರಿಯ ಆರೋಗ್ಯಾಧಿಕಾರಿಗಳಿಗೆ ಸೇರಿದೆ. ಆದರೆ ಬಿಬಿಎಂಪಿಯಲ್ಲಿ 38 ಕಿರಿಯ ಹಾಗೂ 30 ಹಿರಿಯ ಆರೋಗ್ಯಾಧಿಕಾರಿಗಳ ಹುದ್ದೆ ಖಾಲಿ ಇವೆ.
ಬಿಬಿಎಂಪಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಆ ಸಿಬ್ಬಂದಿಗೆ ಘನ ತ್ಯಾಜ್ಯ ವಿಲೇವಾರಿಯ ನಿರ್ವಹಣೆಯ ಕೆಲಸವನ್ನು ವಹಿಸುವ ಬದಲು ಮಾರ್ಷಲ್‌ಗಳನ್ನು ನೇಮಕ ಮಾಡಿರುವುದು ಕಾನೂನು ಬಾಹಿರ. ಬಿಬಿಎಂಪಿಯ ಈ ಕ್ರಮ ಕರ್ನಾಟಕ ಪಾರದರ್ಶಕ ಕಾಯ್ದೆಯ ನಿಯಮಗಳನ್ನು ಉಲ್ಲಂಘನೆ ಮಾಡಿದಂತಾಗಿದೆ. ಅಲ್ಲದೆ, ಗುತ್ತಿಗೆ ಕಾರ್ಮಿಕರ (ನಿಯಂತ್ರಣ ಮತ್ತು ನಿಷೇಧ) ಕಾಯಿದೆ 1970ಕ್ಕೂ ಈ ಕ್ರಮ ವಿರುದ್ಧವಾಗಿದೆ ಎಂದು ಪೀಠಕ್ಕೆ ವಿವರಿಸಿದರು.