ಬೆಂಗಳೂರು:ಬೀದರ್ ಶಾಹೀನ್ ಶಾಲೆಯಲ್ಲಿ ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸಮವಸ್ತ್ರದಲ್ಲೇ ತೆರಳಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.
ಪೊಲೀಸರು ಸಮವಸ್ತ್ರದಲ್ಲೇ ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ರವಿವರ್ಮಕುಮಾರ್, ಫೆ. 3 ಮತ್ತು 4 ರಂದು ಪೊಲೀಸರು ವಿದ್ಯಾರ್ಥಿಗಳನ್ನು ಸಮವಸ್ತ್ರದಲ್ಲೇ ವಿಚಾರಣೆಗೆ ಒಳಪಡಿಸುತ್ತಿರುವ ಫೋಟೋಗಳನ್ನು ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಈ ಕುರಿತು ಪರಿಶೀಲಿಸುವುದಾಗಿ ತಿಳಿಸಿದರು.
ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ ಪೀಠ, ಫೋಟೋದಲ್ಲಿ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸುತ್ತಿರುವ ಪೊಲೀಸ್ ಅಧಿಕಾರಿಗಳು ಘಟನೆ ಕುರಿತು ಒಂದು ವಾರದ ಒಳಗೆ ವಿವರಣೆ ನೀಡಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿತು. ಜೊತೆಗೆ ಫೋಟೋಗಳನ್ನು ದಾಖಲೆಗಳಾಗಿ ಪರಿಗಣಿಸುವುದಾಗಿ ತಿಳಿಸಿ ವಿಚಾರಣೆಯನ್ನು ಮಾ.18ಕ್ಕೆ ಮುಂದೂಡಿದೆ.