ಕರ್ನಾಟಕ

karnataka

ETV Bharat / state

ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷ, ಸದಸ್ಯರ ನೇಮಕ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Etv Bharathigh court issued notice to the state government regarding vacant posts in state-human-rights-commission
ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷ, ಸದಸ್ಯರ ನೇಮಕ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Jun 20, 2023, 7:28 PM IST

ಬೆಂಗಳೂರು:ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿಯಾಗಿರುವ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ವಕೀಲರಾದ ಸುಧಾ ಕಾಟ್ವ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ. ಎಸ್. ಕಮಲ್ ಅವರಿದ್ದ ನ್ಯಾಯಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ ಕಾರ್ಯದರ್ಶಿ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

ಅಲ್ಲದೆ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ, ರಾಜ್ಯದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆ ಖಾಲಿ ಆಗಿ ಹಲವು ತಿಂಗಳುಗಳೇ ಕಳೆದಿದ್ದರೂ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿವರಿಸಿದರು.

ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧ ರಾಜ್ಯದ ದೂರದ ಊರುಗಳಿಂದ ಬರುವ ಜನರು ತಮ್ಮ ಹಕ್ಕುಗಳಿಗೆ ಧಕ್ಕೆ ಆಗಿರುವ ಬಗ್ಗೆ ದೂರು ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೆ, ಆಯೋಗದ ಸದಸ್ಯ ಕೆ.ಬಿ. ಚಂಗಪ್ಪ 2023ರ ಫೆ.17ರಂದು, ಮತ್ತೋರ್ವ ಸದಸ್ಯ ಆರ್. ಕೆ. ದತ್ತ ಅವರ ಅವಧಿ 2023ರ ಫೆ.24ಕ್ಕೆ ಮತ್ತು ಆಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ನ್ಯಾ. ಡಿ. ಎಚ್. ವಘೇಲಾ ಅವರ ಅವಧಿ 2023ರ ಮಾ.10ಕ್ಕೆ ಮುಕ್ತಾಯವಾಗಿದೆ.

ಅರ್ಜಿದಾರರು 2023ರ ಮಾ.24ಕ್ಕೆ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಸರ್ಕಾರ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಪೀಠಕ್ಕೆ ವಿವರಿಸಿದರು. ಜತೆಗೆ, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಹುದ್ದೆಗಳು ಖಾಲಿಯಾದರೆ ಅವುಗಳನ್ನು ಕೂಡಲೇ ಅಂದರೆ ಮೂರು ತಿಂಗಳಲ್ಲಿ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಡಿ. ಕೆ. ಬಸು ಪ್ರಕರಣದಲ್ಲಿ ತಿಳಿಸಿದೆ. ಆದರೆ, ರಾಜ್ಯ ಸರ್ಕಾರ ಆ ತೀರ್ಪನ್ನು ಪಾಲನೆ ಮಾಡಿಲ್ಲ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಸಂಬಂಧ ನಿರ್ಲಕ್ಷ್ಯವನ್ನು ಮುಂದುವರಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಬಿಬಿಎಂಪಿ ವಾರ್ಡ್ ಪುನರ್‌ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

ABOUT THE AUTHOR

...view details