ಬೆಂಗಳೂರು:ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಕ್ಷತಾ ಚೌಗುಲೆ ಸೇರಿದಂತೆ ಇತರೆ 20 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತಾತ್ಕಾಲಿಕ ಆಯ್ಕೆ ಪಟ್ಟಿಗೆ ಮುಂದಿನ ವಿಚಾರಣೆವರೆಗೂ ತಾತ್ಕಾಲಿಕ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಅಲ್ಲದೆ, ಪ್ರತಿವಾದಿಗಳಾದ ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ಕೇಂದ್ರೀಕೃತ ನೇಮಕಾತಿ ವಿಭಾಗ ವಿಶೇಷಾಧಿಕಾರಿ, ಚಿಕ್ಕೋಡಿ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು ದಕ್ಷಿಣ, ಉತ್ತರ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಹಿನ್ನೆಲೆ ಏನು?:15,000 ಪದವೀಧರರ ಪ್ರಾರ್ಥಮಿಕ ಶಾಲಾ ಶಿಕ್ಷಕರ(6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಫೆಬ್ರವರಿ 22ರಂದು ಅಧಿಸೂಚನೆ ಹೊರಡಿಸಿತ್ತು. ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿದಾರರು ಅರ್ಜಿಗಳನ್ನು ಸಲ್ಲಿಸಿದ್ದರು. ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರ‍್ಯಾಂಕ್ ಗಳಿಸಿದ್ದರು.
ಅಲ್ಲದೆ, 1:2 ದಾಖಲೆಗಳ ಪರಿಶೀಲನೆಗೆಗಾಗಿ ಅರ್ಜಿದಾರರನ್ನು ಅರ್ಹರಾಗಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಇಲಾಖೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಆದರೆ, 2022ರ ನವೆಂಬರ್ 18ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಿರುವ ಯಾವುದೇ ಅಭ್ಯರ್ಥಿ ಆಯ್ಕೆಯಾಗಿರಲಿಲ್ಲ. ಆದರೆ, ಅರ್ಜಿದಾರರಿಗಿಂತಲೂ ಕಡಿಮೆ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇದನ್ನು ಕಂಡು ಅರ್ಜಿದಾರರು ಗಾಬರಿಗೊಳ್ಳುವಂತಾಗಿತ್ತು.