ಬೆಂಗಳೂರು :ಪೋಕ್ಸೋ ಪ್ರಕರಣದಲ್ಲಿ ಪೊಲೀಸರ ತನಿಖೆ ವಿಳಂಬವಾದ ಕಾರಣ ಆರೋಪಿ ಶಿಕ್ಷಕನಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಚಿತ್ರದುರ್ಗದ ಶಿಕ್ಷಕರೊಬ್ಬರು ಶಾಲಾ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದರು. ಹಾಗೆಯೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಪೀಠ ಮಾನ್ಯ ಮಾಡಿ, ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಆರೋಪಿ ಶಿಕ್ಷಕ ಒಂದು ಲಕ್ಷ ರೂ. ಮೊತ್ತದ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು, ಪೊಲೀಸರ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಪಡಿಸಬಾರದು, ಪ್ರತಿ ತಿಂಗಳು ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದಿಸಿ, ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಪೋಕ್ಸೋ ಕಾಯ್ದೆ ಜಾರಿಗೊಳಿಸಿದ್ದು, ಇದರಡಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಅವಕಾಶವಿಲ್ಲ ಎಂದಿದ್ದರು.
ವಾದ ತಳ್ಳಿಹಾಕಿರುವ ಪೀಠ, ಪೋಕ್ಸೋ ಕಾಯ್ದೆ ಅನುಸಾರ ದೂರು ದಾಖಲಾದ ತಕ್ಷಣ ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕು. ಆದರೆ, ಮೇ ತಿಂಗಳಲ್ಲಿ ದೂರು ದಾಖಲಾಗಿದ್ದರೂ, ಪೊಲೀಸರು ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಇನ್ನು ದೂರುದಾರ ಪಾಲಕರು ಹಾಗೂ ಎಫ್ಐಆರ್ನಲ್ಲಿ ಉಲ್ಲೇಖಿಸಿರುವ 6 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಸಿಆರ್ಪಿಸಿ ಸೆಕ್ಷನ್ 164ರ ಅಡಿ ದಾಖಲಿಸಿಕೊಂಡಿಲ್ಲ. ಹೀಗಾಗಿ, ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನೆಲೆ :
ಚಿತ್ರದುರ್ಗದ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಿಸಿದ್ದಳು. ಈ ಕುರಿತು ಪಾಲಕರು ವಿಚಾರಿಸಿದಾಗ, ಶಾಲೆಯಲ್ಲಿ ಶಿಕ್ಷಕನೋರ್ವ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತನಗಷ್ಟೇ ಅಲ್ಲದೆ, ಬೇರೆ ವಿದ್ಯಾರ್ಥಿನಿಯರಿಗೂ ಇದೇ ರೀತಿ ತೊಂದರೆ ನೀಡುತ್ತಿದ್ದಾರೆ ಎಂದು ದೂರಿದ್ದಳು. ವಿದ್ಯಾರ್ಥಿನಿಯ ತಾಯಿ ಶಾಲೆಗೆ ಭೇಟಿ ನೀಡಿ ಮಗಳ ಸ್ನೇಹಿತೆಯರನ್ನು ವಿಚಾರಿಸಿದಾಗ, ಅವರು ಕೂಡ ಇದೇ ಅನುಭವ ಹೇಳಿಕೊಂಡಿದ್ದರು. ಇದರಿಂದ ಪಾಲಕರು ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ, ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.