ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ಧ್ವಜ ಸ್ತಂಭಗಳನ್ನು ಮತ್ತು ಪ್ರತಿಮೆಗಳನ್ನು ಸ್ಥಾಪಿಸದಂತೆ ನಿರ್ದೇಶನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿದೆ.
ರಸ್ತೆ, ಪಾದಚಾರಿ ಮಾರ್ಗಗಳಲ್ಲಿ ಧ್ವಜಸ್ತಂಭ, ಪ್ರತಿಮೆ ಸ್ಥಾಪಿಸದಂತೆ ಪಿಐಎಲ್: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಬಿಬಿಎಂಪಿ ವ್ಯಾಪ್ತಿಯ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಧ್ವಜ ಸ್ತಂಭಗಳನ್ನು ಮತ್ತು ಪ್ರತಿಮೆಗಳನ್ನು ಸ್ಥಾಪಿಸದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಪೀಠ, ಅರ್ಜಿಯೊಂದಿಗೆ ಸಲ್ಲಿಸಿರುವ ಫೋಟೋಗಳಲ್ಲಿ ಸೂಚಿಸಿರುವ ಸ್ಥಳಗಳಿಗೆ ಬಿಬಿಎಂಪಿ ಅಧಿಕಾರಿಗಳು ಹಾಗೂ ನಗರ ಪೊಲೀಸರು ಜಂಟಿಯಾಗಿ ತೆರಳಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದೆ.
ಈ ಕುರಿತಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿಯೊಂದಿಗೆ ಸಲ್ಲಿಸಿರುವ ಪೋಟೋಗಳಲ್ಲಿ ಸೂಚಿಸಿರುವ ಸ್ಥಳಗಳಿಗೆ ಬಿಬಿಎಂಪಿ ಅಧಿಕಾರಿಗಳು ಹಾಗೂ ನಗರ ಪೊಲೀಸರು ಜಂಟಿಯಾಗಿ ತೆರಳಿ ಪರಿಶೀಲನೆ ನಡೆಸಬೇಕು.
ಆ ಕುರಿತಂತೆ ಸಮಗ್ರ ವರದಿ ಸಲ್ಲಿಸಬೇಕು. ಒಂದು ವೇಳೆ ರಸ್ತೆ, ಪಾದಚಾರಿ ಮಾರ್ಗ ಮತ್ತು ಸಾರ್ವಜನಿಕ ಸ್ಥಗಳಗಳಲ್ಲಿ ಅನಧಿಕೃತವಾಗಿ ಧ್ವಜ ಸ್ತಂಭ ಮತ್ತು ಪ್ರತಿಮೆ ಸ್ಥಾಪಿಸಿರುವುದು ಕಂಡ ಬಂದರೆ, ಕೂಡಲೇ ಬಿಬಿಎಂಪಿ ಕಾನೂನು ರೀತಿ ಕ್ರಮ ಜರುಗಿಸಬೇಕು. ನ್ಯಾಯಾಲಯದ ಈ ಆದೇಶದ ಅನುಪಾಲನಾ ವರದಿಯನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು ಎಂದು ಸೂಚಿಸಿದ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿತು.