ಬೆಂಗಳೂರು: ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ಸೋಂಕಿತರಿಂದ ಅಕ್ರಮವಾಗಿ ಹಣ ವಸೂಲು ಮಾಡುತ್ತಿವೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಹಾಗೂ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕೊರೊನಾ ಹೆಸರಲ್ಲಿ ವಸೂಲಿ ಆರೋಪ : ಖಾಸಗಿ ಆಸ್ಪತ್ರೆಗಳ ಒಕ್ಕೂಟಕ್ಕೆ ಹೈಕೋರ್ಟ್ ನೋಟಿಸ್! - High Court notice to Coalition of Private Hospitals
ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಹಾಗೂ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
![ಕೊರೊನಾ ಹೆಸರಲ್ಲಿ ವಸೂಲಿ ಆರೋಪ : ಖಾಸಗಿ ಆಸ್ಪತ್ರೆಗಳ ಒಕ್ಕೂಟಕ್ಕೆ ಹೈಕೋರ್ಟ್ ನೋಟಿಸ್! High Court](https://etvbharatimages.akamaized.net/etvbharat/prod-images/768-512-9719660-22-9719660-1606754443787.jpg)
ಈ ಕುರಿತು ಶಿವಮೊಗ್ಗದ ಡಾ. ಎಸ್. ರಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆಗಳ ಒಕ್ಕೂಟ, ಸುವರ್ಣ ಆರೋಗ್ಯ ಟ್ರಸ್ಟ್ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ಪಿ. ಅಮೃತೇಶ್ ವಾದ ಮಂಡಿಸಿ, ರಾಜ್ಯ ಸರ್ಕಾರ ಕೊರೊನಾಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಆಯ್ಕೆಗೆ ಯಾವುದೇ ಮಾನದಂಡ ನಿಗದಿಪಡಿಸಿಲ್ಲ, ಸೋಂಕಿತರನ್ನು ಸುಲಿಗೆ ಮಾಡಲು ಕೆಲವು ಆಸ್ಪತ್ರೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಅವುಗಳಿಗೆ ಯಾವುದೇ ನಿಯಂತ್ರಣ ಇಲ್ಲದಾಗಿದೆ ಎಂದು ಆರೋಪಿಸಿದರು.