ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡಿರುವ ಆದೇಶ ರದ್ದುಪಡಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓ ಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮಕುಮಾರ್ ಮಂಡಿಸಿದ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಎಲ್ಲಾ 30 ಜಿಲ್ಲಾಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿ ಜುಲೈ 1ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಪಿಐಎಲ್ ಸಾರಾಂಶ :2020ರ ಮೇ 30ಕ್ಕೆ ಅವಧಿ ಕೊನೆಗೊಂಡ ರಾಜ್ಯದ 6015 ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಬೇಕಿತ್ತು. ಆದರೆ, ಮೇ 28ರಂದು ಆದೇಶ ಹೊರಡಿಸಿ ಚುನಾವಣೆಗಳನ್ನು ಮುಂದೂಡಲಾಗಿದೆ. ಚುನಾವಣಾ ಆಯೋಗದ ಈ ಆದೇಶವನ್ನು ರದ್ದುಗೊಳಿಸಬೇಕು. ಹಾಗೆಯೇ ಪಂಚಾಯತ್‌ಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡುವ ಪ್ರಕ್ರಿಯೆಗೆ ತಡೆ ನೀಡಬೇಕು. ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸುವಂತೆ ಮತ್ತು ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ ರಾಜ್ಯ ಸರ್ಕಾರ ಮೀಸಲು ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸಕಾಲದಲ್ಲಿ ಆಯೋಗಕ್ಕೆ ಪಟ್ಟಿ ನೀಡಲು ನಿರ್ದೇಶಿಸಬೇಕು ಎಂದು ಕೋರಲಾಗಿದೆ.