ಬೆಂಗಳೂರು :ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆ ಭರ್ತಿ ಮಾಡಬೇಕು ಹಾಗೂ ಕಳೆದ ನಾಲ್ಕು ವರ್ಷಗಳಿಂದ ಕಾರ್ಯ ಸ್ಥಗಿತಗೊಂಡಿರುವ ಕಲಬುರಗಿ ಪೀಠದ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ಇಂದು ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ವಕೀಲಾರದ ಸುಧಾ ಕಾಟ್ವ ಎಂಬವರು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಬಳಿಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೊಟೀಸ್ ಜಾರಿಗೊಳಿಸಿ, ನಾಲ್ಕು ವಾರಗಳಲ್ಲಿ ಉತ್ತರ ನೀಡುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಕೀಲ ವಾದ: ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಸ್. ಉಮಾಪತಿ, ಸಾರ್ವಜನಿಕರ ಅನುಕೂಲಕ್ಕಾಗಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಭಾಗದ ಜನರಿಗೆ ಪ್ರಯೋಜನವಾಗುವ ಉದ್ದೇಶದಿಂದ ಕರ್ನಾಟಕ ಮಾಹಿತಿ ಆಯೋಗದ ಪೀಠಗಳನ್ನು ಬೆಳಗಾವಿ ಮತ್ತು ಕಲಬುರಗಿಯಲ್ಲಿ 2019ರಲ್ಲಿ ಸರ್ಕಾರ ರಚನೆ ಮಾಡಿತು. ಆದರೆ, 2019ರಿಂದಲೇ ಕಲಬುರಗಿ ಪೀಠ ಕಾರ್ಯಾಚರಿಸುತ್ತಿಲ್ಲ.
2022ರ ಏಪ್ರಿಲ್‌ನಲ್ಲಿ ಕಲಬುರಗಿ ಪೀಠಕ್ಕೆ ರವೀಂದ್ರ ಢಾಕಪ್ಪ ಅವರನ್ನು ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಯಿತು. ಆದರೆ, ಅವರು ಕಲಬುರಗಿಯ ಬದಲಿಗೆ ಬೆಂಗಳೂರಿನಲ್ಲೇ ಕಲಾಪ ನಡೆಸುತ್ತಿದ್ದಾರೆ. ಅದೇ ರೀತಿ ಗೀತಾ ಅವರ ರಾಜೀನಾಮೆಯಿಂದ 2022ರ ಏಪ್ರಿಲ್‌ನಿಂದ ಬೆಳಗಾವಿ ಪೀಠದ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.