ಬೆಂಗಳೂರು :ರಾಜ್ಯದ ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಶಾಶ್ವತ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬೀದರ್ನ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ : ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪಟ್ಟಿ ಪರಿಶೀಲಿಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಅರ್ಜಿದಾರರ ಕೋರಿಕೆ- ರಾಜ್ಯದಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಅಂತೆಯೇ ಬೀದರ್ ಜಿಲ್ಲೆಯಲ್ಲೂ ಗೋವುಗಳಿಗೆ ಮೇವಿನ ಅಭಾವ ಎದುರಾಗಿದೆ. ಇದರಿಂದ ರೈತರು ಅಸಹಾಯಕರಾಗಿ, ಗೋವುಗಳನ್ನು ರಸ್ತೆಯಲ್ಲಿ ಬಿಡುತ್ತಿದ್ದಾರೆ. ಇದರಿಂದ ಹಲವು ಸಮಸ್ಯೆಗಳು ಉದ್ಭವವಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಶ್ವತ ಗೋಶಾಲೆ ತೆರೆಯುವಂತೆ ಕೋರಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ಪಶು ಸಂಗೋಪನೆ ಇಲಾಖೆಗೆ 2020ರ ಜ.13 ರಂದು ಮನವಿ ಪತ್ರ ಸಲ್ಲಿಸಲಾಗಿದೆ.
ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೋಶಾಲೆ ತೆರೆಯುವ ಕುರಿತು ಯೋಜನೆಗಳನ್ನು ರೂಪಿಸಿವೆ. ಗೋಶಾಲೆ ತೆರೆಯಲು ರಾಜ್ಯ ಸರ್ಕಾರ ಈವರೆಗೆ 700 ಕೋಟಿ ರೂಪಾಯಿ ವ್ಯಯಿಸಿದೆ. ಆದರೆ, ಶಾಶ್ವತ ಗೋಶಾಲೆ ನಿರ್ಮಿಸಿಲ್ಲ. ಹೀಗಾಗಿ ಶಾಶ್ವತ ಗೋಶಾಲೆ ನಿರ್ಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.