ಬೆಂಗಳೂರು: ಕೋವಿಡ್-19 ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ಕೊರೊನಾ ವಾರಿಯರ್ಸ್ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವಿಚಾರಣೆ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಎದುರಿಸುತ್ತಿರುವ ಸಂಕಷ್ಟಗಳನ್ನು ಆಲಿಸಿದ ಪೀಠ ಇವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು. ತ್ಯಾಜ್ಯ ಸಂಗ್ರಹ, ವಿಲೇವಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಅಪಾಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸುರಕ್ಷತೆ ಇಲ್ಲದಿರುವುದರಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾಗೆ ತುತ್ತಾಗುತ್ತಿದ್ದಾರೆ.
ಇತ್ತೀಚಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪೌರ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಂಟೇನ್ಮೆಂಟ್ ವಲಯದಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ನೀಡಬೇಕೆಂಬ ಕೋರ್ಟ್ ಆದೇಶ ಪಾಲಿಸುತ್ತಿಲ್ಲ. ನೂರಾರು ಪೊಲೀಸರಿಗೆ ಸೋಂಕು ತಗುಲಿದ್ದು, ಹಲವು ಪೊಲೀಸ್ ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಈಗಾಗಲೇ ನಾಲ್ವರು ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ.
ಬಿಬಿಎಂಪಿ ಅಧಿಕಾರಿ ಮತ್ತು ಸಿಬ್ಬಂದಿಗೂ ಸೋಂಕು ತಗುಲಿದ್ದು, ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ, ಇವರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಸೂಚಿಸಲು ಅರ್ಜಿದಾರ ವಕೀಲರು ಮನವಿ ಮಾಡಿದ್ದರು.