ಬೆಂಗಳೂರು:ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ, ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗೋ ಹತ್ಯೆ ಪ್ರತಿಬಂಧಕ ಸುಗ್ರೀವಾಜ್ಞೆಯನ್ನು ರದ್ದುಗೊಳಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್ ವಾದಿಸಿ, ಕಾಯ್ದೆಯ ಸೆಕ್ಷನ್ 5 ರ ಪ್ರಕಾರ ಜಾನುವಾರುಗಳನ್ನು ಸಾಗಿಸುವುದು ಕೂಡ ಅಪರಾಧವಾಗಿದೆ. ಇದರಿಂದಾಗಿ ರೈತರು ತಮ್ಮದೇ ಜಾನುವಾರುಗಳನ್ನು ಸಾಗಣೆ ಮಾಡಲು ಕಷ್ಟವಾಗಲಿದೆ ಎಂದರು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸ್ಪಷ್ಟನೆ ನೀಡಿ, ಕಾಯ್ದೆಗೆ ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ನಿಯಮಗಳನ್ನು ರೂಪಿಸಿದರೆ, ಈ ಗೊಂದಲಗಳು ನಿವಾರಣೆಯಾಗಲಿವೆ ಎಂದರು. ಮಧ್ಯಪ್ರವೇಶಿಸಿದ ಪೀಠ, ಸೆಕ್ಷನ್ 5ರಂತೆ ಜಾನುವಾರುಗಳನ್ನು ಒಂದೆಡೆಯಿಂದ ಮತ್ತೊಂದೆಡೆ ಸಾಗಿಸುವುದು ಕೂಡ ಶಿಕ್ಷಾರ್ಹ ಅಪರಾಧವೆನ್ನಲಾಗಿದೆ. ಹಾಗೆಯೇ ಸೆಕ್ಷನ್ 2, 12 ಹಾಗೂ 13ರ ಪ್ರಕಾರ ಜಾನುವಾರುಗಳ ಸಾಗಣೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆಗೆ ಒಳಪಡಿಸಬಹುದಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗಬಹುದು, ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದಿತು.
ಅಡ್ವಕೇಟ್ ಜನರಲ್ ಪ್ರತಿಕ್ರಿಯಿಸಿ, ಈ ಸಂಬಂಧ ಸ್ಪಷ್ಟನೆ ನೀಡಲು ಒಂದಿಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಪೀಠ, ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿತು. ಇದೇ ವೇಳೆ ಅರ್ಜಿಗೆ ಫೆಬ್ರವರಿ 17ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿತು.
ಅರ್ಜಿದಾರರ ಕೋರಿಕೆ
1964 ರಿಂದ ಕರ್ನಾಟಕದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಗೋ ಹತ್ಯೆ ತಡೆ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ, ಜಾನುವಾರು ರಕ್ಷಣೆ ಹೆಸರಿನಲ್ಲಿ ಸುಗ್ರೀವಾಜ್ಞೆ ಅಗತ್ಯವಿಲ್ಲ. ರಾಜ್ಯದ ಈ ಸುಗ್ರೀವಾಜ್ಞೆ ಸಂವಿಧಾನದ ಮೂಲ ತತ್ವ ಹಾಗೂ ಆಶಯಗಳಿಗೆ ವಿರುದ್ಧವಾಗಿದೆ. ಮುಸ್ಲಿಂರು, ದಲಿತರು ಮತ್ತು ಇತರೆ ಅಲ್ಪಸಂಖ್ಯಾತರ ಆಹಾರದ ಹಕ್ಕನ್ನು ಕಸಿದುಕೊಳ್ಳಲಿದೆ. ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯದೇ ಹೋದರೂ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದು ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿದೆ. ಸಂವಿಧಾನ ಆಶಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಮಾಡುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ರಾಜ್ಯದಲ್ಲಿ ಎಲ್ಲಾ ವಯಸ್ಸಿನ ಆಕಳು, ಕರು, ಗೂಳಿ, ಎತ್ತು ಹಾಗೂ 13 ವರ್ಷದೊಳಗಿನ ಕೋಣ ಅಥವಾ ಎಮ್ಮೆಗಳ ಹತ್ಯೆಯನ್ನು ನಿಷೇಧಿಸಲು ಸರ್ಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ನ್ನು ರೂಪಿಸಿದೆ. 2020 ಡಿ.9 ರಂದು ಮಂಡಿಸಿದಾಗ, ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತಾದರೂ, ವಿಧಾನ ಪರಿಷತ್ತಿನಲ್ಲಿ ಅನುಮೋದನೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ನಿಯಮ ಜಾರಿ ಮಾಡಲು ಸರ್ಕಾರ ರಾಜ್ಯಪಾಲರ ಒಪ್ಪಿಗೆ ಮೇರೆಗೆ ಸುಗ್ರೀವಾಜ್ಞೆ ಹೊರಡಿಸಿದೆ.