ಬೆಂಗಳೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸೊಸೈಟಿಗಳ ಒಕ್ಕೂಟದಲ್ಲಿ, ವಿವಿಧ ವರ್ಗಗಳ 193 ಉದ್ಯೋಗಗಳ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ 3 ವಾರಗಳ ತಡೆಯಾಜ್ಞೆ ನೀಡಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮೈಸೂರಿನ ಪಿ.ಎನ್. ಚೈತ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ, ಈ ಮಧ್ಯಂತರ ಆದೇಶ ನೀಡಿದೆ.
ಅರ್ಜಿದಾರರ ಪರ, ವಾದ ಮಂಡಿಸಿದ ಹಿರಿಯ ವಕೀಲ ವಿವೇಕ ರೆಡ್ಡಿ, ಸಂದರ್ಶನದ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ, ಪರೀಕ್ಷೆ ಬರೆದವರ ಪ್ರಶ್ನೆ ಪತ್ರಿಕೆ ವಾಪಸು ಪಡೆಯಲಾಗಿದೆ ಹಾಗೂ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ಸರ್ಕಾರ ನೀಡಿದ್ದ ನಿರ್ದೇಶನಗಳನ್ನು ಪಾಲನೆ ಮಾಡಲಾಗಿಲ್ಲ. ಆದ್ದರಿಂದ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿದರು.