ಬೆಂಗಳೂರು: ಮಂಡ್ಯ ಜಿಲ್ಲೆ ಕೆ. ಆರ್ ಪೇಟೆ ತಾಲೂಕಿನ ಅಂಬಿಗರ ಹಳ್ಳಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಗುರುತಿಸಿರುವ ನಿವೇಶನದ ಕುರಿತು ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸುವ ಮನವಿ ಪತ್ರವನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ. ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಅಂಬಿಗರಹಳ್ಳಿ ಗ್ರಾಮದಲ್ಲಿ ನಿವೇಶನ ಗುರುತಿಸುತ್ತಿರುವುದನ್ನು ಆಕ್ಷೇಪಿಸಿ ಸ್ಥಳೀಯರಾದ ಎ.ಬಿ ದೇವರಾಜು ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರು ತಮ್ಮ ಕುಂದುಕೊರತೆ ಕುರಿತು 10 ದಿನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಬೇಕು. ನಂತರ 6 ವಾರಗಳಲ್ಲಿ ಜಿಲ್ಲಾಧಿಕಾರಿಗಳು ಅರ್ಜಿದಾರರ ಕುಂದುಕೊರತೆ ಆಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.